ಕರ್ನಾಟಕಕ್ಕೆ 3,187 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಅನುಮೋದನೆ: ನಿತಿನ್ ಗಡ್ಕರಿ
ನವದೆಹಲಿ: ಕಳೆದ ಐದು ಹಣಕಾಸು ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಎಕ್ಸ್‌ಪ್ರೆಸ್‌ವೇಗಳು ಮತ್ತು ಆರ್ಥಿಕ ಕಾರಿಡಾರ್‌ಗಳು ಸೇರಿದಂತೆ 3,187 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು.
ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು. ದಾವಣಗೆರೆ ಲೋಕಸಭಾ ಸದಸ್ಯೆ ಪ್ರಭಾ ಮಲ್ಲಿಕಾರ್ಜುನ್ ಅವರು ಸರ್ಕಾರವನ್ನು ಗ್ರಾಮೀಣ ಪ್ರದೇಶಗಳಲ್ಲಿ ಬಿಎಸ್‌ಎನ್‌ಎಲ್ ಟವರ್‌ಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿದರು ಮತ್ತು ಬಿಎಸ್‌ಎನ್‌ಎಲ್ ಉದ್ಯೋಗಿಗಳಿಗೆ ಶೀಘ್ರ ವೇತನ ಪರಿಷ್ಕರಣೆ ಮಾಡುವಂತೆಯೂ ಒತ್ತಾಯಿಸಿದರು.
ಬುಧವಾರ ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, ಈಗಲೂ ಸಹ, ಚನ್ನಗಿರಿ ತಾಲ್ಲೂಕಿನ ಹಾಲೇಶಪುರ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಮೊಬೈಲ್ ನೆಟ್‌ವರ್ಕ್ ವ್ಯಾಪ್ತಿ ಇಲ್ಲ ಎಂದು ಹೇಳಿದರು. ಬಿಎಸ್‌ಎನ್‌ಎಲ್ ಟವರ್‌ಗಳನ್ನು ಸ್ಥಾಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಹಾಸನ ಸಂಸದ ಶ್ರೇಯಸ್ ಎಂ ಪಟೇಲ್ ರಾಷ್ಟ್ರೀಯ ಹೆದ್ದಾರಿ 373 (ಬೇಲೂರು-ಹಾಸನ ವಿಭಾಗ) ದ ಚತುಷ್ಪಥ ಯೋಜನೆಗೆ ಪರಿಷ್ಕೃತ ವೆಚ್ಚದ ಅಂದಾಜಿಗೆ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು. ಬುಧವಾರ ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, “ಈ ಕಾರಿಡಾರ್ ಅತ್ಯಂತ ಮುಖ್ಯವಾಗಿದೆ ಏಕೆಂದರೆ ಇದು ಸರಕುಗಳ ತ್ವರಿತ ಸಾಗಣೆಗೆ ಅನುಕೂಲವಾಗುತ್ತದೆ. ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಯೋಜನೆಯನ್ನು ತ್ವರಿತಗೊಳಿಸಬೇಕು.


