

ಬೆಂಗಳೂರು: ದ್ವೇಷ ಭಾಷಣವನ್ನ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025ಕ್ಕೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ್ ಅವರು, ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ, ಬಯಲುಸೀಮೆ ತಿದ್ದುಪಡಿ ವಿಧೇಯಕ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಧಾರ್ಮಿಕ ದತ್ತಿ ವಿಧೇಯಕ, ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕ, ಸಾಮಾಜಿಕಬಹಿಷ್ಕಾರ ನಿಷೇಧ ವಿಧೇಯಕ, ಘಾಟಿ ಸುಬ್ರಮಣ್ಯ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ ಎಂದರು.
1777 ಎಕರೆ ಡಿನೋಟಿಫೈಗೆ ಸಚಿವ ಸಂಪುಟ ಒಪ್ಪಿಗೆ
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ, 1777 ಎಕರೆ ಡಿನೋಟಿಫೈ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
2025 ಜುಲೈ 15ರಂದು ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ 1777ಎಕರೆ ಡಿನೋಟಿಫೈಗೆ ಒಪ್ಪಿಗೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
“ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ವರೆಗೆ ಅವಳಿ ಸುರಂಗ ರಸ್ತೆ ನಿರ್ಮಾಣಕ್ಕೆ ಪೂರಕವಾಗಿ ಎಲಿವೇಟೆಡ್ ಕಾಮಗಾರಿಗಳ ನಿರ್ಮಾಣ ಮಾಡಲು 2215 ಕೋಟಿ ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ” ಎಂದರು.
ಇನ್ನು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ 2025″ದ ಪರಿಷ್ಕೃತ ವೆಚ್ಚ ರೂ.100.70 ಕೋಟಿಗಳಿಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
Advertisement