

ಮಂಡ್ಯ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆಗೆ 10 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಜಿಲ್ಲೆಯ ಅಭಿವೃದ್ಧಿಗೆ ತರಲಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಅವರು ಹೇಳಿದರು.
ಮಂಡ್ಯ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು ಇಂದು ರಾಷ್ಟ್ರಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡಿದಷ್ಟು ಇನ್ಯಾವುದೇ ರಾಜ್ಯಗಳಲ್ಲಿ ನೀಡಿಲ್ಲ ಎಂದು ಹೇಳಿದರು.
ಪಂಚ ಗ್ಯಾರಂಟಿಗಳ ಮೂಲಕ ಪ್ರತಿ ತಾಲೂಕಿಗೆ ವಾರ್ಷಿಕ 250 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲೂ ಸಹ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನ ಘೋಷಿಸಲಾಗುವುದು ಎಂದು ತಿಳಿಸಿದರು.
ಕೃಷಿ ಇಲಾಖೆ ವತಿಯಿಂದ ಸದರಿ ವರ್ಷದ ಏಪ್ರಿಲ್‌ನಿಂದ ಇಲ್ಲಿಯವರೆಗೂ ಕೊಪ್ಪ ಹೋಬಳಿಯ 520 ಫಲಾನುಭವಿಗಳಿಗೆ 150 ಲಕ್ಷ ರೂ.ಗಳ ಸಹಾಯಧನ ನೀಡಲಾಗಿದೆ. ಒಟ್ಟು ಜಿಲ್ಲೆಯಲ್ಲಿ 49,330 ಫಲಾನುಭವಿಗಳಿಗೆ ಕೃಷಿ ಇಲಾಖೆಯ ವಿವಿಧ ಯೋಜನೆಗಳಿಂದ 2390.80 ಲಕ್ಷ ರೂ.ಗಳ ಸಹಾಯಧನ ನೀಡಲಾಗಿದೆ. ಒಬ್ಬರಿಗೆ ಸುಮಾರು 50 ಲಕ್ಷ ರೂ.ವರೆಗೂ ಸಬ್ಸಿಡಿ ನೀಡಲಾಗಿದೆ ಎಂದರು.
ಮಂಡ್ಯ ಜನರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಸ್ಥಗಿತಗೊಂಡಿತ್ತು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಕೃಷಿ ಸಚಿವರು ಮುಖ್ಯಮಂತ್ರಿಗಳ ಬಳಿ ಇದರ ಕುರಿತು ಪ್ರಸ್ಥಾಪಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಕೋಟಿ ಅನುದಾನವನ್ನು ಮೈ ಶುಗರ್ ಕಾರ್ಖಾನೆ ಬಿಡುಗಡೆ ಮಾಡಿ ಮೈ ಶುಗರ್ ಕಾರ್ಖಾನೆ ಪುನಶ್ಚೇತನ ಮಾಡಿದ್ದಾರೆ ಎಂದು ತಿಳಿಸಿದರು.
Advertisement