

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) 18.60 ಕೋಟಿ ರೂ. ಮೌಲ್ಯದ 18.59 ಕೆಜಿ ಹೈಡ್ರೋ ಗಾಂಜಾವನ್ನು ಕಳ್ಳಸಾಗಣೆ ಮಾಡುತ್ತಿದ್ದ ದಂಪತಿಯನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಗಳನ್ನು ಕಮ್ಮನಹಳ್ಳಿಯ ಮೆಕ್ಯಾನಿಕ್ ಸೈಫುದ್ದೀನ್ ಶೇಖ್ (34) ಮತ್ತು ಈತನ ಪತ್ನಿ ಸಾರಾ ಸಿಮ್ರಾನ್ (26) ಎಂದು ಗುರುತಿಸಲಾಗಿದೆ.
ಈ ದಂಪತಿಯಿಂದ 718.60 ಕೋಟಿ ಮೌಲ್ಯದ 18.5 ಕೆ.ಜಿ. ಹೈಡ್ರೋ ಗಾಂಜಾ, ಕಾರು ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಅಕ್ರಮವಾಗಿ ಬ್ಯಾಂಕಾಕ್‌ನಿಂದ ಹೈಡ್ರೋ ಗಾಂಜಾವನ್ನು ನಗರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದ ದಂಪತಿ, ಅದನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ವಿಚಾರ ಪೊಲೀಸರಿಗೆ ತಿಳಿದು ಬಂದಿತ್ತು.
ಇದರಂತೆ ಕೆಲ ದಿನಗಳ ಹಿಂದೆ ರಾಣಿ ಅಬ್ಬಕ್ಕ ಆಟದ ಮೈದಾನದ ಬಳಿ ದಂಪತಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿ, ಬಂಧಿಸಿದ್ದಾರೆ.
ಪ್ರಕರಣದ ಇತರ ಆರೋಪಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಲಾಗಿದೆ, ದಂಪತಿಗಳು ಕೆಐಎಯಲ್ಲಿ ಕಸ್ಟಮ್ಸ್ ತಪಾಸಣೆಯಿಂದ ಹೇಗೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಕೆಐಎಯಿಂದ ಪಡೆದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ.
Advertisement