

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 13 ಅನ್ನು ಮಹಿಳಾ ನೌಕರರ ದಿನವನ್ನಾಗಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಣೆ ಮಾಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಮಹಿಳಾ ನೌಕರರ ಸಮ್ಮೇಳನದಲ್ಲಿ ಮಹಿಳಾ ನೌಕರರ ಸಂಘದ ಮನವಿಗೆ ಸ್ಪಂದಿಸಿ, ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು.
ಮಹಿಳಾ ನೌಕರರಿಗೆ ಋತುಚಕ್ರ ಸಂದರ್ಭದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ. ಮಹಿಳಾ ನೌಕರರ ಸಂಘದ ಕಚೇರಿಯ ಕಾರ್ಯಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೊಂದಿಗೆ ಚರ್ಚಿಸಲಾಗಿದೆ. ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರು ಪುರುಷರಿಗೆ ಸರಿಸಮನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಲಿಂಗತಾರತಮ್ಯ ಹೋಗಲಾಡಿಸಲು ಸರ್ಕಾರ ಬದ್ಧವಾಗಿದೆ. ಎಲ್ಲರನ್ನೂ ಸಮಾನವಾಗಿ ಕಾಣುವ ಬದ್ಧತೆ ನಮ್ಮ ಸರ್ಕಾರದ್ದಾಗಿದೆ ಎಂದು ತಿಳಿಸಿದರು.
ಹಿಂದಿನ ಕಾಲದಲ್ಲಿ ಮಹಿಳೆಯರು ಅಕ್ಷರ ಸಂಸ್ಕೃತಿಯನ್ನು ವಂಚಿತರಾಗಿದ್ದರು. ಸಂವಿಧಾನ ಜಾರಿಯ ನಂತರ ಎಲ್ಲರಿಗೂ ಶಿಕ್ಷಣ ಸೇರಿದಂತೆ ಸಮಾನ ಹಕ್ಕುಗಳನ್ನು ನೀಡಲಾಯಿತು. ಸ್ವಾತಂತ್ರ್ಯ ಬಂದಾಗ ದೇಶದಲ್ಲಿ ಸಾಕ್ಷರತೆಯ ಪ್ರಮಾಣ 10 ರಿಂದ ಶೇ.12 ರಷ್ಟಿತ್ತು. ಇಂದು ಈ ಪ್ರತಿಶತ ಸುಮಾರು 78 ಕ್ಕೆ ಏರಿದೆ. ಮಹಿಳೆಯರು ತಮ್ಮ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವರಲ್ಲಿ ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಬೆಳೆಸಬೇಕು.
ಮಹಿಳೆಯರು ವೈಚಾರಿಕತೆ ಮತ್ತು ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬೇಕು. ಸಾಧ್ಯವಾದ ಮಟ್ಟಿಗೆ ಮೂಢ ನಂಬಿಕೆಗಳು ಮತ್ತು ಅಂಧ ಶ್ರದ್ಧೆಗಳನ್ನ ದೂರ ಮಾಡುವಂಥ ಕೆಲಸ ಮಾಡಬೇಕು. ಮಕ್ಕಳಿಗೂ ಇದನ್ನು ಹೇಳಿಕೊಡಿ. ಆಗ ಮಾತ್ರ ಆರೋಗ್ಯಕರ, ಸಮಾನತೆಯ ಸಮಾಜ ನಿರ್ಮಾಣ ಸಾಧ್ಯ.
ಮಹಿಳೆಯರ ಸಬಲೀಕರಣವಾಗಬೇಕು ಎಂಬ ಉದ್ದೇಶದಿಂದ 3.5 ಕೋಟಿ ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತವಾಗಿ ನಿತ್ಯ ಓಡಾಡುತ್ತಿದ್ದಾರೆ. ಇದನ್ನು ಸಾಮಾಜಿಕ ಬಂಡವಾಳ ಎಂದು ಕರೆಯುತ್ತೇವೆ. ಉಳಿತಾಯವಾಗುವ ಹಣವನ್ನು ಮಕ್ಕಳ ಶಿಕ್ಷಣ ಮುಂತಾದವುಕ್ಕೆ ಬಳಸಿಕೊಳ್ಳಲಾಗುತ್ತದೆ. ಆರನೇ ಮತ್ತು ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರವೇ ಎಂದು ಹೇಳಿದರು.
Advertisement