

ಬೆಳಗಾವಿ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಖಂಡಿಸಿ ಇಂದು ಮಂಗಳವಾರ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೊದಲು 20,000 ಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.
ನಿನ್ನೆ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನಾ ಸ್ಥಳವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಪಕ್ಷದ ಶಾಸಕ ಅಭಯ್ ಪಾಟೀಲ್ ಮತ್ತು ಎಂಎಲ್‌ಸಿ ಸಿ.ಟಿ. ರವಿ ಅವರೊಂದಿಗೆ ವಿಜಯೇಂದ್ರ ಪರಿಶೀಲಿಸಿದರು.
ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ಇಂದು ದೊಡ್ಡ ಮಟ್ಟದ ಹೋರಾಟದ ನಿರೀಕ್ಷೆಯಿದೆ.
"ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷಿಸಿದ್ದಕ್ಕಾಗಿ ನಮ್ಮ ಪ್ರತಿಭಟನೆ ಇದಾಗಿರುತ್ತದೆ. ಕಬ್ಬು, ಜೋಳ, ಭತ್ತ, ತೊಗರಿ ಬೆಳೆಗಾರರು ಮತ್ತು ಇತರ ರೈತರಿಗೆ ಅನ್ಯಾಯವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು, ಆದರೆ ರೈತರ ಸಮಸ್ಯೆಗಳನ್ನು ನಿವಾರಿಸಲು ಏನನ್ನೂ ಮಾಡಲಿಲ್ಲ.
ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವನ್ನು ದೂಷಿಸುವುದು ಅಭ್ಯಾಸ ಮಾಡಿಕೊಂಡಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಪರಿಹಾರ ಸಿಕ್ಕಿಲ್ಲ. ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ 20,000 ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ" ಎಂದು ವಿಜಯೇಂದ್ರ ಹೇಳಿದರು.
ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಮಾಹಿತಿ ನೀಡಿ, ರಾಜ್ಯದಲ್ಲಿ 2400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಜಾನೆ ಖಾಲಿ ಖಾಲಿಯಾಗಿದೆ. ಕಾಂಗ್ರೆಸ್ನವರು ಜಾಲಿ ಜಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಹೇಳಿದ್ದಾರೆ.
Advertisement