

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanuru Shivashankarappa) ವಿಧಿವಶರಾಗಿದ್ದು ಅವರನ್ನು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ರಿಯಾಸಮಾಧಿ ಮಾಡಲಾಗಿದೆ.
ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ ಶಾಮನೂರು ಪುತ್ರ ಎಸ್.ಎಸ್ ಮಲ್ಲಿಕಾರ್ಜುನ ಅಂತಿಮ ಸಂಸ್ಕಾರದ ವಿಧಿವಿಧಾನ ನೆರವೇರಿಸಿದರು. ಅಂತ್ಯಕ್ರಿಯೆಯ ವೇಳೆ ಶಾಮನೂರರ ಪಾರ್ಥಿವ ಶರೀರಕ್ಕೆ ಪೊಲೀಸರು ತ್ರಿವರ್ಣ ಧ್ವಜ ಹೊದಿಸಿ ಗೌರವ ಸೂಚಿಸಿದರು. ಇದಾದ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ತ್ರಿವರ್ಣಧ್ವಜವನ್ನು ಶಾಮನೂರು ಕುಟುಂಬಕ್ಕೆ ನೀಡಿದರು. ರಾಷ್ಟ್ರಗೀತೆಯೊಂದಿಗೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ವಿಶೇಷ ಗೌರವ ಸಲ್ಲಿಸಿದರು. ಬಳಿಕ ವಾದ್ಯವಂದನೆ ಅರ್ಪಿಸಿ, ಬಳಿಕ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.
ಅಂತ್ಯಕ್ರಿಯೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ವಿಪಕ್ಷ ನಾಯಕ ಆರ್. ಅಶೋಕ್, ಸಿ.ಟಿ ರವಿ, ವಿವಿಧ ಮಠಾಧೀಶರು ಹಾಗೂ ಚರ್ಚ್ ಪಾದ್ರಿಗಳು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾಗಿದ್ದು, ಅವರು ಭಾರತದಲ್ಲಿ ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾಗಿದ್ದರು. ಶಾಮನೂರು ಶಿವಶಂಕರಪ್ಪ ಅವರು ವಿಧಾನಸಭೆಗೆ ಆರು ಸಲ ಶಾಸಕರಾಗಿ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದಾರೆ. 1997ರಲ್ಲಿ ದಾವಣಗೆರೆ ಲೋಕಸಭೆ ಮಧ್ಯಂತರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಐದು ದೇಶಕದ ರಾಜಕೀಯ ಜೀವನದಲ್ಲಿ ಒಂದು ಬಾರಿ ಸೋಲನ್ನಪ್ಪಿದ್ದರು. 1994, 2004, 2008, 2013, 2018, 2023ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
Advertisement