
ಭಾನುವಾರ ನಿಧನರಾದ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಇಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಪಾರ್ಥಿವ ಶರೀರದ ಸಾರ್ವಜನಿಕ ದರ್ಶನದ ಬಳಿಕ ರಾಷ್ಟ್ರಗೀತೆಯೊಂದಿಗೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ವಿಶೇಷ ಗೌರವ ಸಲ್ಲಿಸಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳ ನೇತೃತ್ವದಲ್ಲಿ ಎಸ್.ಎಸ್ ಮಲ್ಲಿಕಾರ್ಜುನ ಸೇರಿ ಶಾಮನೂರು ಶಿವಶಂಕರಪ್ಪ ಪುತ್ರರು ಅಂತಿಮ ಸಂಸ್ಕಾರದ ವಿಧಿವಿಧಾನ ನೆರವೇರಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ಆರ್.ವಿ ದೇಶಪಾಂಡೆ, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಸುಧಾಕರ್, ಈಶ್ವರ್ ಖಂಡ್ರೆ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇನ್ನಿತರ ರಾಜಕೀಯ ಗಣ್ಯರು ಸಿರಿಗೆರೆ ಶ್ರೀಗಳು, ವಚನಾನಂದಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಭಾನುವಾರ ನಿಧನರಾದ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸೋಮವಾರ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಸಂತಾಪ ಸೂಚಿಸಲಾಯಿತು. ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಶಾಮನೂರು ಶಿವಶಂಕರಪ್ಪಗೆ ಅವರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು. ಇದೇ ವೇಳೆ ಚಳಿಗಾಲದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೋಮವಾರ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಚರ್ಚಿಸಿ ಅವುಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ ಎಂದು ಅಶೋಕ್ ಹೇಳಿದ್ದಾರೆ.
ಪ್ರೋಟಿನ್ ಮೂಲವಾಗಿರುವ ಆಹಾರ ಪದಾರ್ಥಗಳ ಪೈಕಿ ಒಂದಾಗಿರುವ ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿರುವ ಬಗ್ಗೆ ಸುದ್ದಿ ಬೆಳಕಿಗೆ ಬಂದಿದೆ. ಜನಪ್ರಿಯ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ. ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಎಂಬ ಔಷಧದ ಕಣಗಳು ಕಂಡುಬಂದಿದ್ದು, ಇದು ಡಿಎನ್‌ಎಯಿಂದ ಸಂತಾನೋತ್ಪತ್ತಿ ಅಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗೆ ಎಲ್ಲದಕ್ಕೂ ಹಾನಿ ಮಾಡುತ್ತದೆ, ಇದು ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಗಳಿಗೂ ಕಾರಣವಾಗಬಹುದು ಎಂಬ ಮಾಹಿತಿ ಬಹಿರಂಗವಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ. ಆದರೆ, ಈ ಹೊಸ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಕೂಲಂಕುಷ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿದೇಶದಲ್ಲಿದ್ದಾಗ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಭಾರತಕ್ಕೆ ಬಂದಿಳಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಬ್ದುಲ್ ಖಾದರ್ ನೆಹಾದ್ ಮಂಗಳೂರಿನ ಉಲಾಯಿಬೆಟ್ಟು ನಿವಾಸಿಯಾಗಿದ್ದು, ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಎಂದು ಅವರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅಕ್ಟೋಬರ್ 11 ರಂದು 'team_sdpi_2025' ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಿಂದೂ ಧರ್ಮಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ನ್ನು ಅಪ್‌ಲೋಡ್ ಮಾಡಿದ ನಂತರ ಬಜ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು.
ರಸ್ತೆ, ಚರಂಡಿ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರಶ್ನಿಸಿದ್ದಾರೆ. ಬಂಜಾರ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆ ಮತ್ತು ಚರಂಡಿಗಳ ನಿರ್ಮಾಣದಿಂದ ಜನಸಮೂಹ ನಿಜವಾಗಿಯೂ ಉದ್ದಾರವಾಗುತ್ತದೆಯೇ? ಎಂದು ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರನ್ನು ಉದ್ದೇಶಿಸಿ ಪ್ರಶ್ನಿಸಿದ್ದಾರೆ. ಸಾವಿರಾರು ವರ್ಷಗಳ ಶೋಷಣೆಯನ್ನು ಕೊನೆಗಾಣಿಸುವುದು ಮತ್ತು ಜನರ ಜೀವನವನ್ನು ಸುಧಾರಿಸುವುದೇ ಗ್ಯಾರಂಟಿ ಯೋಜನೆಗಳ ಮುಖ್ಯ ಉದ್ದೇಶ. ನಾವು ರಸ್ತೆ, ಮನೆ ನಿರ್ಮಾಣ ಅಥವಾ ನೀರಾವರಿ ಯೋಜನೆಗಳನ್ನು ನಿಲ್ಲಿಸಿಲ್ಲ, ಅವು ನಿಧಾನವಾಗಿರಬಹುದು ಎಂದು ಪರಮೇಶ್ವರ್ ಹೇಳಿದ್ದಾರೆ.
Advertisement