

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ, ಒಕ್ಕಲಿಗ ನಾಯಕತ್ವ ಮತ್ತು ಇತರೆ ಗಣ್ಯರು ಡಿಸೆಂಬರ್ 17 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಕರ್ನಾಟಕ ಸಂಘ ಮತ್ತು ಮೈಸೂರಿನ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ದಿ ಟ್ರಸ್ಟ್ ಆಯೋಜಿಸಿರುವ ಪದ್ಮವಿಭೂಷಣ ಕುವೆಂಪು ಕುರಿತ ಕಾರ್ಯಾಗಾರದಲ್ಲಿ ಆದಿಚುನಾನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭಾಗವಹಿಸಲಿದ್ದಾರೆ.
ಕೇಂದ್ರವು ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಪ್ರಲ್ಹಾದ್ ಜೋಶಿ, ಮತ್ತು ವಿ.ಸೋಮಣ್ಣ, ಬಿಜೆಪಿ ಸಂಸದರಾದ ಡಾ.ಸಿ.ಎನ್.ಮಂಜುನಾಥ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ತೇಜಸ್ವಿ ಸೂರ್ಯ, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಟಿ.ಬಿ.ಜಯಚಂದ್ರ, ಚಂದ್ರಶೇಖರ ಕಂಬಾರ, ನಾಡೋಜ ಹಂಪ ನಾಗರಾಜಯ್ಯ, ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಮಾಧವ ಕೌಶಿಕ್ ಸೇರಿದಂತೆ ಮತ್ತಿತರರು ಭಾಗವಹಿಸುವ ನಿರೀಕ್ಷೆ ಇದೆ.
Advertisement