
2024–25ನೇ ಸಾಲಿಗೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಿಂದ ಕರ್ನಾಟಕಕ್ಕೆ ಕಡಿಮೆ ಬಡ್ಡಿ ದರದಲ್ಲಿ 2.185 ಕೋಟಿ ರೂ. ನೆರವು ಕಡಿತವಾಗಿದ್ದು, ಇದು ರಾಜ್ಯದ ಕೃಷಿ ಸಾಲ ವ್ಯವಸ್ಥೆಗೆ ಹೊಡೆತ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ. ಕೇಂದ್ರ ಬೆಂಬಲಿತ ನಬಾರ್ಡ್‌ನಿಂದ ರಾಜ್ಯವು ₹5.600 ಕೋಟಿ ಪಡೆಯಲು ಅರ್ಹವಾಗಿದ್ದರೂ, ಇಲ್ಲಿಯವರೆಗೆ ಕೇವಲ ₹3.415 ಕೋಟಿ ಮಾತ್ರ ಬಿಡುಗಡೆಯಾಗಿದೆ ಎಂದು ಅವರು ವಿಧಾನಸಭೆಗೆ ತಿಳಿಸಿದರು. ಮಂಗಳವಾರ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಣಿಗಲ್ ಶಾಸಕ ಡಾ.ಎಚ್.ಡಿ. ರಂಗನಾಥ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಹಣಕಾಸಿನ ಕೊರತೆಯು ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾಥಮಿಕ ಕೃಷಿ ಸಾಲ ಸಹಕಾರಿ ಸಂಘಗಳ ಮೂಲಕ ಸಬ್ಸಿಡಿ ಕೃಷಿ ಸಾಲಗಳ ವಿತರಣೆಯ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಹೇಳಿದರು.
ಕೊಪ್ಪಳದ ಬಿಸರಹಳ್ಳಿಯ ನೃಪತುಂಗ ಪ್ರೌಢ ಶಾಲೆ ಮತ್ತು ಹೊಸಲಿಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದ ಮಧ್ಯಾಹ್ನದ ಬಿಸಿಯೂಟ ಮತ್ತು ಇತರ ಆಹಾರ ಪದಾರ್ಥಗಳಲ್ಲಿ ಹುಳುಗಳು ಹಾಗೂ ನುಶಿ ಪತ್ತೆಯಾಗಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಮಕ್ಕಳ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದ ಶಾಲಾ ಸಿಬ್ಬಂದಿ ಮತ್ತು ಶಿಕ್ಷಣ ಇಲಾಖೆಯ ವಿರುದ್ಧ ಸ್ಥಳೀಯ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ ಬೆನ್ನಲ್ಲೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಲ್ ಇಂದು ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆಗೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಜಿಲ್ಲಾಡಳಿತ ಬಿಸಿಯೂಟ ತಯಾರಿಸುವ ಮತ್ತು ಅಧೀನ ಸಿಬ್ಬಂದಿಯನ್ನು ತಕ್ಷಣವೇ ಅವರ ಹುದ್ದೆಗಳಿಂದ ಅಮಾನತುಗೊಳಿಸಿದ್ದು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿಂತಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಎಂದು ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಸರ್ಕಾರ ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸುತ್ತಿದೆ. ಇಂತಹ ಚಟುವಟಿಕೆಗಳನ್ನು ನಿಯಂತ್ರಿಸಲು ಕಾನೂನು ಬಲಪಡಿಸುವಿಕೆಯನ್ನು ಸರ್ಕಾರ ಪರಿಗಣಿಸಲಿದೆ ಎಂದು ಭರವಸೆ ನೀಡಿದರು. ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಣ್ಣು ಭ್ರೂಣ ಹತ್ಯೆ ಖಂಡಿತ ನಿಂತಿಲ್ಲ. ನೀವು ಲಿಂಗ ಅನುಪಾತವನ್ನು ನೋಡಿದರೆ, ಬಹಳಷ್ಟು ವ್ಯತ್ಯಾಸವಿದೆ. ಇದು ನಡೆಯುತ್ತಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ರಾವ್ ಹೇಳಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ 12 ವಿಧೇಯಕಗಳನ್ನು ಅಂಗೀಕಾರಿಸಲಾಗಿದೆ. 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ, 2025ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯಾ ದತ್ತಿಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಭೂ ಕಂದಾಯ 2ನೇ ತಿದ್ದುಪಡಿ ವಿಧೇಯಕ, ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕ, ಕರ್ನಾಟಕ ಚಲನಚಿತ್ರ ಮತ್ತು ಸಾಂಸ್ಕೃತಿಕ ಕಾರ್ಯಕರ್ತರು ಕಲ್ಯಾಣ ತಿದ್ದುಪಡಿ ವಿಧೇಯಕ ಸೇರಿದಂತೆ ಒಟ್ಟು 12 ವಿಧೇಯಕಗಳಿಗೆ ಅಂಗೀಕಾರ ಸಿಕ್ಕಿದೆ. ಡಿಸೆಂಬರ್ 8ರಿಂದ ಅಧಿವೇಶನ ಪ್ರಾರಂಭವಾಗಿದ್ದು 19ರವರೆಗೆ ನಡೆಯಲಿದೆ. 10 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಒಟ್ಟಾರೆ 30 ವಿಧೇಯಕಗಳನ್ನು ಮಂಡಿಸುವ ಸಾಧ್ಯತೆ ಇದೆ.
ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಹಲವು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಶಿವಮೊಗ್ಗ, ಧಾರವಾಡ ಹಾಗೂ ವಿಜಯನಗರ ಸೇರಿದಂತೆ ರಾಜ್ಯದ ಹಲವು ಕಡೆ ಭ್ರಷ್ಟ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಸವನಗುಡಿ ಪ್ರದೇಶದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮತ್ತೊಂದೆಡೆ ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿರುವ ರಾಜಶೇಖರ್ ಅವರ ಧಾರವಾಡದಲ್ಲಿರುವ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಲೋಕಾಯುಕ್ತ ಸಿಬ್ಬಂದಿ ಕಂಡು ಬೆದರಿದ ರಾಜಶೇಖರ್ ಸುಮಾರು 50 ಸಾವಿರ ಹಣವನ್ನು ಕಮೋಡ್‌ಗೆ ಸುರಿದು ಫ್ಲಶ್ ಮಾಡಿದ್ದಾರೆ. ವಿಜಯನಗರ ಡಿಎಚ್‌ಒ ಡಾ. LR ಶಂಕರ್ ನಾಯ್ಕ್ ಮನೆ, ಕಚೇರಿ ಹಾಗೂ ಪತ್ನಿ ನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.
Advertisement