HD ಕುಮಾರಸ್ವಾಮಿ ವಿರುದ್ಧದ ಭೂಕಬಳಿಕೆ ಆರೋಪ: ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ

ಕೇತಗಾನಹಳ್ಳಿ ಗ್ರಾಮದ ಸರ್ವೆ ನಂಬರ್‌ 8, 9, 10, 16, 17 ಮತ್ತ 79ರಲ್ಲಿ ಮಂಜೂರಾತಿಯಾಗಿರುವ ಜಮೀನುಗಳ ಸಂಪೂರ್ಣ ದಾಖಲೆಗಳ ನೈಜತೆಯನ್ನು ಪರಿಶೀಲಿಸಬೇಕು.
HD Kumaraswamy
ಎಚ್.ಡಿ. ಕುಮಾರಸ್ವಾಮಿ
Updated on

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಅವರ ಕುಟುಂಬದ ಸದಸ್ಯರು ಮತ್ತು ಸಂಬಂಧಿಗಳು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿದ್ದಾರೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಅಧ್ಯಕ್ಷತೆಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ–1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ–2011ರ ಅಡಿಯಲ್ಲಿ ಈ ವಿಶೇಷ ತನಿಖಾ ತಂಡ ರಚಿಸಿ ಕಂದಾಯ ಇಲಾಖೆಯು ಜನವರಿ 28ರಂದು ಆದೇಶ ಹೊರಡಿಸಿದೆ.

ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್‌ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಅವರನ್ನು ಎಸ್‌ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್‌–2 ತಹಶೀಲ್ದಾರ್‌ ಶೀತಲ್‌ ಅವರನ್ನು ಎಸ್‌ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‌, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಆ ಬೆನ್ನಲ್ಲೇ ಎಸ್‌ಐಟಿ ರಚಿಸಲಾಗಿದೆ.

ಕೇತಗಾನಹಳ್ಳಿ ಗ್ರಾಮದ ಸರ್ವೆ ನಂಬರ್‌ 8, 9, 10, 16, 17 ಮತ್ತ 79ರಲ್ಲಿ ಮಂಜೂರಾತಿಯಾಗಿರುವ ಜಮೀನುಗಳ ಸಂಪೂರ್ಣ ದಾಖಲೆಗಳ ನೈಜತೆಯನ್ನು ಪರಿಶೀಲಿಸಬೇಕು. ದಾಖಲೆಗಳ ನೈಜತೆಯನ್ನು ಪರಿಶೀಲಿಸಲು ಅಗತ್ಯವಿದ್ದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೂ ಕಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

HD Kumaraswamy
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ ಎಸ್ ಆರ್ ಹಿರೇಮಠ್

ಕಾಲಮಿತಿಯೊಳಗೆ ಸಮಿತಿ ವರದಿ: ಈ ಮಧ್ಯೆ ನ್ಯಾಯಾಲಯದ ನಿರ್ದೇಶನದಂತೆ ಸಮಿತಿ ರಚಿಸಿ ತನಿಖೆ ನಡೆಸಲಾಗುತ್ತಿದ್ದು, ಕಾಲಮಿತಿಯೊಳಗೆ ಸಮಿತಿ ವರದಿ ಸಲ್ಲಿಸಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com