
ಮಂಗಳೂರ: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿ ಮೇಲೆ ಮಂಗಳೂರು ಪೊಲೀಸರು ಶನಿವಾರ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿಂದೆ ಸ್ಥಳ ಮಹಜರು ವೇಳೆ ಪರಾರಿಗೆ ಯತ್ನಿಸಿದ್ದ ಆರೋಪಿಗೆ ಗುಂಡೇಟಿನ ರುಚಿ ತೋರಿಸಿದ್ದರು.
ನಗರದ ಹೊರವಲಯದ ಉಳ್ಳಾಲ ಬಳಿಯ ಅಜ್ಜಿನಡ್ಕದಲ್ಲಿ ಸಾಕ್ಷ್ಯ ಸಂಗ್ರಹಕ್ಕಾಗಿ ಕರೆದೊಯ್ಯುತ್ತಿದ್ದಾಗ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮುರುಗನ್ ತೇವರ್ ಮೇಲೆ ಮಂಗಳೂರು ನಗರ ಪೊಲೀಸರು ಗುಂಡು ಹಾರಿಸಿದ್ದಾರೆ.
ಆರೋಪಿ ದರೋಡೆಗೆ ಬಳಸಿದ್ದ ಪಿಸ್ತೂಲ್ ಅನ್ನು ಬಚ್ಚಿಟ್ಟಿದ್ದ. ಅದನ್ನು ರಿಕವರಿ ಮಾಡಲು ಆತನನ್ನು ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸ್ ಕಾನ್‌ಸ್ಟೆಬಲ್ ಮರ್ಮಾಂಗಕ್ಕೆ ಒದ್ದು ತಪ್ಪಿಸಿಕೊಳ್ಳುವುದಕ್ಕೆ ಯತ್ನಿಸಿದ್ದಾನೆ. ಆರೋಪಿ ಮುರುಗನ್ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಂತೆ ಉಳ್ಳಾಲ ಇನ್ಸ್ಪೆಕ್ಟರ್ ಬಾಲಕೃಷ್ಣ ಆತನ ಕಾಲಿಗೆ ಶೂಟ್ ಮಾಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿಗಳಾದ ಮುರುಗನ್ ತೇವರ್ ಮತ್ತು ಯೋಸುವ ರಾಜೇಂದ್ರನ್ ನನ್ನು ಹೆಚ್ಚಿನ ತನಿಖೆಗಾಗಿ ಫೆಬ್ರವರಿ 3 ರವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಘಟನೆಯ ನಂತರ, ಗಾಯಗೊಂಡ ಕಾನ್ಸ್‌ಟೇಬಲ್ ಮಂಜುನಾಥ್ ಮತ್ತು ಆರೋಪಿ ಮುರುಗವ್ ತೇವರ್ ಇಬ್ಬರನ್ನೂ ವೈದ್ಯಕೀಯ ಚಿಕಿತ್ಸೆಗಾಗಿ ತಕ್ಷಣವೇ ಯೆನೆಪೋಯ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇಬ್ಬರೂ ಪ್ರಸ್ತುತ ಅಪಾಯದಿಂದ ಪಾರಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
Advertisement