
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಹಾಗೂ ತಮ್ಮ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಗಳ ಕುರಿತು ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳಿಗೆ ಇಂದು ನಿರ್ಣಾಯಕ ದಿನವಾಗಿದೆ,
ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಪ್ರಕರಣದ ಮೂಲ ದೂರದಾರ ಹಾಗೂ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಜ. 27ರಂದು ಪೂರ್ಣಗೊಳಿಸಿ ಕಾದಿರಿಸಿರುವ ತೀರ್ಪನ್ನು ಇಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಲಿದೆ.
ಮುಡಾ ನಿವೇಶನ ಹಂಚಿಕೆ ಅಕ್ರಮದ ಪ್ರಕರಣದ ಅಭಿಯೋಜನೆ ಮತ್ತು ಪೊಲೀಸ್ ತನಿಖೆಗೆ ರಾಜ್ಯಪಾಲರು ನೀಡಿದ್ದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ಗೆ 2024ರ ಆ.19ರಂದು ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠವು 2024ರ ಸೆ. 24ರಂದು ಆದೇಶಿಸಿತ್ತು. ಈ ತೀರ್ಪಿನಲ್ಲಿ ಪ್ರಕರಣದ ತನಿಖೆ ನಡೆಯುವುದು ಅತ್ಯಗತ್ಯವಿದೆ ಎಂದು ಹೇಳಿತ್ತು. ಇದೀಗ ಸಿಬಿಐ ತನಿಖೆಗೆ ಆದೇಶಿಸಬೇಕೆಂಬ ಮನವಿ ಕುರಿತ ತೀರ್ಪನ್ನು ಸಹ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ ನೀಡಬೇಕಾಗಿದೆ.
ಇನ್ನು ಪೋಕ್ಸೋ ಪ್ರಕರಣ ಕುರಿತಂತೆಯೂ ಇಂದು ತೀರ್ಪು ಹೊರಬೀಳಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಂದು ನಿರ್ಣಾಯಕವಾಗಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಕುರಿತು ವಿಚಾರಣೆ ನಡೆಸಿ ಜ. 17ರಂದು ಕಾದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಪ್ರಕಟಿಸಲಿದೆ.
Advertisement