ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹಠಾತ್ ಸಾವು ಪ್ರಕರಣಗಳನ್ನು ಗಂಭೀರವಾಗಿ ರಾಜ್ಯ ಸರ್ಕಾರ ಈ ಬಗ್ಗೆ ತನಿಖೆ ನಡೆಸಲು ತಜ್ಞರ ಸಮಿತಿಯೊಂದನ್ನು ರಚಿಸಿದೆ. ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಕ್ಕಳಲ್ಲಿ, ಯುವ ಸಮೂಹದಲ್ಲೂ ಹೃದಯಾಘಾತದಿಂದ ದಿಢೀರ್ ಸಾವುಗಳಾಗುತ್ತಿದ್ದು ಇದರ ಬಗ್ಗೆ ತಜ್ಞರ ಸಮಿತಿ ರಚಿಸುವಂತೆ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಪತ್ರ ಬರೆದಿದ್ದರು.
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಇದರಿಂದಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ತೀರ್ಪು ಪ್ರಕಟಿಸಿದೆ. ಮತ್ತೊಂದೆಡೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಧಾರವಾಡ ಹೈಕೋರ್ಟ್ ಪೀಠ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣ ರದ್ದುಪಡಿಸುವಂತೆ ಯಡಿಯೂರಪ್ಪ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಈ ಪ್ರಕರಣ ರದ್ದು ಮಾಡಲು ಕೋರ್ಟ್ ನಿರಾಕರಿಸಿದೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ರಾಜ್ಯದಲ್ಲಿ ಅನೇಕರು ಆತ್ಮಹತ್ಯೆಗೆ ಶರಣಾಗಿದ್ದು ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದಾರೆ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ರಾಜ್ಯಪಾಲರ ನಡೆಯಿಂದಾಗಿ ಇದೀಗ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ ಹೇಗೆ ಹಾಕುತ್ತೀರಾ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶ್ನಿಸಿ ಸುಗ್ರೀವಾಜ್ಞೆಯ ಕರಡನ್ನು ವಾಪಸ್ ಕಳುಹಿಸಿದ್ದಾರೆ.
ಮಧ್ಯಪ್ರದೇಶದ ಇಂದೋರ್ ನಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ. ಬೆಳಗಾವಿಯ ಟಿಟಿ ಚಾಲಕ ಸಾಗರ್ ಶಾಪುರಕರ್, ನೀತಾ ಬಡಮಂಜಿ ಸಂಗೀತಾ ಮೇತ್ರಿ ಮತ್ತು ಜ್ಯೋತಿ ಖಾಂಡೇಕರ್ ಮೃತ ದುರ್ದೈವಿಗಳು. ಬೆಳಗಾವಿಯ 20 ಜನರ ತಂಡವೊಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿರುವ 16 ಮಂದಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಯಾಂಡಲ್‌ವುಡ್‌ನಲ್ಲಿ ಇಂದು ಮದುವೆ ಸಂಭ್ರಮ ಜೋರಾಗಿತ್ತು. ಹಿರಿಯ ನಟಿ ಜಯಮಾಲಾ ಪುತ್ರಿ ಸೌಂದರ್ಯ ಹಸೆಮಣೆ ಏರಿದ್ದರೆ, ಮತ್ತೊಂದೆಡೆ ನಟಿ ರಕ್ಷಿತಾ ಸಹೋದರ ರಾಣಾ ಸಹ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರು ಅರಮನೆ ಮೈದಾನದ ಚಾಮರ ವಜ್ರದಲ್ಲಿ ರಕ್ಷಿತಾ ಸಹೋದರ ನಟ ರಾಣಾ ಪ್ರೇಯಸಿ ರಕ್ಷಿತಾ ಜೊತೆ ಹಸೆಮಣೆ ಏರಿದರು. ಮತ್ತೊಂದೆಡೆ ಬೆಂಗಳೂರಿನ ಗಾಯಿತ್ರಿ ವಿಹಾರದಲ್ಲಿ ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಜಯಮಾಲಾ ಅವರ ಪುತ್ರಿ ಸೌಂದರ್ಯ, ರುಷಬ್ ಎಂಬುವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನವ ದಂಪತಿಗಳಿಗೆ ಯಶ್, ಸುದೀಪ್ ಉಪೇಂದ್ರ ಸೇರಿದಂತೆ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಶುಭ ಹಾರೈಸಿದರು.
Advertisement