ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆ ಮತ್ತೆ ಗವರ್ನರ್ ಅಂಗಳಕ್ಕೆ: ಆಕ್ಷೇಪಗಳಿಗೆ ಸರ್ಕಾರ ಸುದೀರ್ಘ ಸ್ಪಷ್ಟನೆ, ಸಿಗಲಿದೆಯೇ ರಾಜ್ಯಪಾಲರ ಅನುಮೋದನೆ?

ರಾಜ್ಯ ಸರ್ಕಾರ ಕಳುಹಿಸಿದ್ದ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ಸುಗ್ರೀವಾಜ್ಞೆ-2025ಕ್ಕೆ ಸ್ಪಷ್ಟನೆ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶುಕ್ರವಾರ ವಾಪಸ್ ಕಳುಹಿಸಿದ್ದರು.
Thaawarchand Gehlot
ತಾವರ್ ಚಂದ್ ಗೆಹ್ಲೋಟ್
Updated on

ಬೆಂಗಳೂರು: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಸುದೀರ್ಘ ಹಾಗೂ ಸಮರ್ಪಕ ಸ್ಪಷ್ಟನೆಗಳೊಂದಿಗೆ ರಾಜ್ಯ ಸರ್ಕಾರ ಸೋಮವಾರ ಕಡತವನ್ನು ರಾಜ್ಯಪಾಲರ ಅನುಮೋದೆಗಾಗಿ ಮತ್ತೆ ರವಾನಿಸಿದೆ.

ಸಾಲ ಪಡೆದವರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಕಳುಹಿಸಿದ್ದ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ಸುಗ್ರೀವಾಜ್ಞೆ-2025ಕ್ಕೆ ಸ್ಪಷ್ಟನೆ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶುಕ್ರವಾರ ವಾಪಸ್ ಕಳುಹಿಸಿದ್ದರು. ಸುಗ್ರೀವಾಜ್ಞೆಯು ಸಹಜ ಹಾಗೂ ಸಾಲ ನೀಡುವವರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೇ ರಾಜ್ಯಪಾಲರು ಎತ್ತಿದ್ದ ಎಲ್ಲಾ ಪ್ರಶ್ನೆಗಳಿಗೂ ಸುದೀರ್ಘ ಸ್ಪಷ್ಟನೆಯನ್ನು ಕಾನೂನು ಇಲಾಖೆ ಸಿದ್ಧಪಡಿಸಿ ಮುಖ್ಯಮಂತ್ರಿ ಕಚೇರಿಗೆ ಸಲ್ಲಿಸಿದ್ದು. ಇದನ್ನು ಮುಖ್ಯಮಂತ್ರಿಗಳು ಪರಾಮರ್ಶಿಸಿ ಅಂತಿಮಗೊಳಿಸಿದ ಬಳಿಕ ಸ್ಪಷ್ಟನೆಗಳೊದಿಗೆ ಸುಗ್ರೀವಾಜ್ಞೆಯ ಕಡತವನ್ನು ಸೋಮವಾರ ರಾಜಭವನಕ್ಕೆ ರವಾನಿಸಿ ಅನುಮೋದನೆ ಕೋರಿದ್ದಾರೆ.

ವಿವರವಾದ ಸ್ಪಷ್ಟನೆಗಳೊಂದಿಗೆ ಈ ಸುಗ್ರೀವಾಜ್ಞೆ ಅಗತ್ಯತೆ, ಅನಿವಾರ್ಯತ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡು ಪ್ರಯತ್ನವನ್ನು ಸರ್ಕಾರ ಮಾಡಿದ್ದು, ಇದಕ್ಕೆ ರಾಜ್ಯಪಾಲರು ಅನುಮೋದನೆ ನೀಡುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ.

ರಾಜ್ಯಪಾಲರ ಆಕ್ಷೇಪಗಳಿಗೆ ಈ ಹಿಂದೆ ಸ್ಪಷ್ಟನೆ ನೀಡಿದ್ದ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ನೋಂದಾಯಿತವಲ್ಲದ ಮತ್ತು ಸಾಲ ನೀಡಲು ಲೈಸನ್ಸ್ ಹೊಂದಿರದ ಯಾವುದೇ ವ್ಯಕ್ತಿಯು ಯಾರಿಗೇ ಸಾಲ ಕೊಡಲು ಮತ್ತು ಹೆಚ್ಚಿನ ಬಡ್ಡಿ ಮತ್ತು ಚಕ್ರಬಡ್ಡಿ ಅಥವಾ ದಂಡದ ಬಡ್ಡಿ ವಿಧಿಸಲು ಕಾನೂನಾತ್ಮಕವಾಗಿ ಅಧಿಕಾರ ಹೊಂದಿರುವುದಿಲ್ಲ. ಸಾಲವನ್ನು ಖಾಸಗಿಯಾಗಿ, ಲೈಸೆನ್ಸ್ ಇಲ್ಲದೇ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡಿದರೆ ಅದು ಕಾನೂನು ವಿರೋಧಿ ಕ್ರಮವಾಗಿದೆ. ಅಂತಹ ಸಾಲವು ವಸೂಲಿಗೆ ಅರ್ಹವೂ ಅಲ್ಲ, ಯೋಗ್ಯವೂ ಅಲ್ಲ ಎಂದು ಹೇಳಿದ್ದರು.

Thaawarchand Gehlot
ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ರಾಜ್ಯಪಾಲರಿಗೆ ಸ್ಪಷ್ಟೀಕರಣ ಕಳುಹಿಸಲಿರುವ ಸರ್ಕಾರ

ಕಾನೂನಿನ ಪ್ರಕಾರ ವಿಧಿಸಿದ ಬಡ್ಡಿ ಮೇರೆಗೆ ನೀಡಿದ ಸಾಲ ಮಾತ್ರ ವಸೂಲಿಗೆ ಅರ್ಹ. ಬೇರೆ ಯಾವುದೇ ಅಕ್ರಮ ಸಾಲ ಮತ್ತು ಬಡ್ಡಿ ವಸೂಲಾತಿ ಅರ್ಜಿಗಳನ್ನು ಕಾನೂನಾತ್ಮಕವಾಗಿ ನ್ಯಾಯಾಲಯಗಳು ಕೂಡಾ ವಿಚಾರಣೆಗೆ ಒಳಪಡಿಸಲು ಸಾಧ್ಯವೇ ಇಲ್ಲ. ಇಂತಹ ಸಾಲವನ್ನು ವಸೂಲಿ ಮಾಡಲು ಮತ್ತು ವಿಧಿಸಿದ ಬಡ್ಡಿಯನ್ನು ಕಾನೂನಾತ್ಮಕವಾಗಿ ಕೂಡ ವಸೂಲಾತಿಗೆ ಅವಕಾಶ ನೀಡಿದರೆ ಸಂವಿಧಾನದ ಬಹುದೊಡ್ಡ ರಕ್ಷಣೆಯು ಸಮಾಜದಲ್ಲಿ ಅಕ್ರಮ ಬಡ್ಡಿ ವಿಧಿಸಿ ಅಕ್ರಮವಾಗಿ ಕಾನೂನುಬಾಹಿರವಾಗಿ ಸಾಲ ವಸೂಲಿ ಮಾಡುವ ವ್ಯಕ್ತಿಗಳಿಗೆ ಲಭ್ಯವಾಗುತ್ತದೆ. ಇದು ಸಂವಿಧಾನ ಮತ್ತು ಕಾನೂನು ವಿರೋಧಿ. ಜೊತೆಗೆ ಸಮಾಜಕ್ಕೆ ಕಂಟಕ ತರುವಂತಹ ಕ್ರಮವೇ ಹೊರತು ಸಂವಿಧಾನಾತ್ಮಕವಾಗುವುದಿಲ್ಲ ಎಂದು ತಿಳಿಸಿದ್ದರು.

ಕಾನೂನಾತ್ಮಕವಾಗಿ ನೋಂದಾಯಿತ ಸಂಸ್ಥೆ ಅಥವಾ ವ್ಯಕ್ತಿಗಳು ನಿಯಮಾನುಸಾರ ನೈಜ ಸಾಲ ನೀಡಿದವರು ವಸೂಲಿ ಮಾಡಬಾರದೆಂದು ಅಥವಾ ಅಂತಹ ಸಾಲಗಳು ವಸೂಲಿಗೆ ಅರ್ಹವಲ್ಲವೆಂದು ರಾಜ್ಯಪಾಲರಿಗೆ ಸಲ್ಲಿಸಿರುವ ಸುಗ್ರೀವಾಜ್ಞೆಯಲ್ಲಿ ಸರ್ಕಾರ ಎಲ್ಲಿಯೂ ಹೇಳಿಲ್ಲ. ಕೇವಲ ಸಾಲ ವಸೂಲಾತಿಗೆ ಕಾನೂನು ಬಾಹಿರ ಕ್ರಮಗಳನ್ನು ಕೈಗೊಳ್ಳುವುದು, ಹಿಂಸೆ ಮಾಡುವುದು ಮತ್ತು ಒತ್ತಡ ತಂತ್ರ ಹೇರುವುದು ಹಾಗೂ ಕಿರುಕುಳಕ್ಕೆ ಕಾರಣವಾಗುವುದನ್ನು ತಡೆಯಲು/ನಿಷೇಧಿಸಲು ಸುಗ್ರೀವಾಜ್ಞೆ ಪ್ರಸ್ತಾಪಿಸುತ್ತದೆ. ನೈಸರ್ಗಿಕ ನ್ಯಾಯ ಮತ್ತು ಯಾವುದೇ ವ್ಯಕ್ತಿಯ ಹಕ್ಕುಗಳಿಗೆ ಮತ್ತು ಕಾನೂನಾತ್ಮಕ ಹೋರಾಟಕ್ಕೆ ಮೂಲಭೂತ ಹಕ್ಕುಗಳಿಗೆ ಧಕ್ಕೆತರುವಂತಹ ಯಾವುದೇ ಕ್ರಮ ಸುಗ್ರೀವಾಜ್ಞೆಯಲ್ಲಿ ಪ್ರಸ್ತಾಪಿಸಿಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

ಅಲ್ಲದೆ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆಕ್ಷೇಪ ವ್ಯಕ್ತಪಡಿಸಿದ 5 ಲಕ್ಷ ರೂ. ದಂಡವನ್ನು ಸಚಿವರು ಸಮರ್ಥಿಸಿಕೊಂಡಿದ್ದರು.

ಸಾಲ ಕೊಟ್ಟಿರುವ ಮೊತ್ತ ಪರಿಗಣಿಸಿ ದಂಡ ಅಥವಾ ದಂಡನೆ ವಿಧಿಸಿಲ್ಲ. ಸಾಲ ವಸೂಲಾತಿ ಪ್ರಕ್ರಿಯೆ ಸಂದರ್ಭದಲ್ಲಿ ಕಿರುಕುಳ/ಒತ್ತಡ ತಂತ್ರ, ಹಿಂಸೆ, ಕಿರುಕುಳ ನೀಡುವ ಮೂಲಕ ವಸೂಲಾತಿಯ ಕ್ರಮಗಳಿಗೆ ದಂಡ ಮತ್ತು ದಂಡನೆಯನ್ನು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com