
ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 5-6 ಮಂದಿಯನ್ನು ವಶಕ್ಕೆ ಪಡೆದಿದ್ದಾರೆಂದು ಗೃಹ ಸಚಿವ ಪರಮೇಶ್ವರ್ ಅವರು ಬುಧವಾರ ಹೇಳಿದ್ದಾರೆ.
ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾನೂನನ್ನು ಕೈಗೆತ್ತಿಕೊಂಡವನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಗುರುತಿಸಲಾಗಿದೆ. ಈಗಾಗಲೇ 5-6 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಗಲಭೆಯಲ್ಲಿ ತೊಡಗಿದ್ದ ಯಾರನ್ನೂ ಬಿಡುವುದಿಲ್ಲ. ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ನಡುವೆ ಕಲ್ಲು ತೂರಾಟಕ್ಕೆ ವ್ಯಕ್ತಿಯೊಬ್ಬ ಮಾಡಿದ್ದ ಪ್ರಚೋದನಾಕಾರಿ ಭಾಷಣ ಕಾರಣ ಎಂಬ ಮಾತುಗಳು ಇದೀಗ ಕೇಳ ಬರುತ್ತಿದೆ. ಇದೀಗ ಪ್ರಚೋದನಕಾರಿ ಭಾಷಣ ಮಾಡಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲೇನಿದೆ...?
“ಧರ್ಮ ರಕ್ಷಣೆಗೆ ಬದ್ಧತೆ ನಿನ್ನೆಯೂ ಇತ್ತು, ಇವತ್ತು ಇದೆ. ಎಲ್ಲರೂ ಘೋಷಣೆ ಕೂಗಿ, ನಾವು ಪ್ರಾಣ ಬೇಕಾದರೂ ಕೊಡುತ್ತೇವೆ. ಸದಾ ಮುಸ್ಲಿಮನ್ನು ಗುರಿ ಮಾಡಲಾಗುತ್ತಿದೆ. ಸುರೇಶ್ ಹೆಸರಿನ ನಾಯಿ, ಸುರೇಶ್ ಹೆಸರಿನ ಹರಾಮಿ ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು ಮರಣದಂಡನೆ ವಿಧಿಸಬೇಕು. ನಿಮ್ಮ ಇಚ್ಛೆ ಏನು? ಆತನಿಗೆ ಮರಣದಂಡನೆಯಾಗಬೇಕು ಎಂಬುವುದು. ಮೈಸೂರಿನ ಎಲ್ಲ ಮುಸ್ಲಿಂರು ಒಂದಾಗಿ. ಇದಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ. ಈ ವಿಡಿಯೋವನ್ನು ಎಲ್ಲ ಕಡೆ ಶೇರ್ ಮಾಡಿ” ಎಂದು ಭಾಷಣ ಮಾಡಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.
ಏನಿದು ಘಟನೆ?
ಸೋಷಿಯಲ್ ಮಿಡೀಯಾದಲ್ಲಿ ವ್ಯಕ್ತಿಯೊಬ್ಬ ಮಾಡಿದ್ದ ಪೋಸ್ಟ್ ವೊಂದು ಒಂದು ಸಮುದಾಯವನ್ನು ಕೆರಳಿಸಿದೆ. ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದಾರೆ. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.
ಪೋಸ್ಟ್ ನಲ್ಲೇನಿತ್ತು?
ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಯುವಕನೋರ್ವ ಸಂಸದ ರಾಹುಲ್ ಗಾಂಧಿ, ಉತತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿವಸ್ತ್ರಗೊಳಿಸಿ, ಭಾವಚಿತ್ರಕ್ಕೆ ತಲೆ ಮೇಲೆ ಮುಸ್ಲಿಮರು ಬಳಸುವ ಟೊಪ್ಪಿ ಇಟ್ಟು, ದೇಹದ ಮೇಲೆಲ್ಲಾ ಉರ್ದು ಭಾಷೆಯ ಕೆಲ ಪದ ಬರೆದು ಪೋಸ್ಟ್ ಮಾಡಿದ್ದ. ಇದು ಮುಸ್ಲಿಂ ಸಮುದಾಯದವರು ಕೆರಳುವಂತೆ ಮಾಡಿದೆ.
Advertisement