
ಮೈಸೂರು: 50:50 ಯೋಜನೆಯಡಿ ಮುಡಾದಿಂದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತವರ ಪತ್ನಿ ಹಾಗೂ ಸಂಬಂಧಿಕರಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ವರದಿಯಾಗಿದೆ.
ಕೇಂದ್ರ ಕಚೇರಿಗೆ ಸಲ್ಲಿಸಿದ ಅಂತಿಮ ತನಿಖಾ ವರದಿಯಲ್ಲಿ, ನಿವೇಶನ ಹಂಚಿಕೆಯಲ್ಲಿನ ಲೋಪಗಳಿಗೆ ಮುಡಾ ಅಧಿಕಾರಿಗಳು ಕಾರಣರಾಗಿದ್ದಾರೆ, ಮುಖ್ಯಮಂತ್ರಿ ಅಥವಾ ಅವರ ಪತ್ನಿ ಮತ್ತು ಸಂಬಂಧಿಕರು ಇದರಲ್ಲಿ ಯಾವುದೇ ಪಾತ್ರವಿಲ್ಲ ಎಂದು ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೇಔಟ್ ಅಭಿವೃದ್ಧಿಪಡಿಸಲು ಕೆಸಾರೆಯಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ 3.16 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಕ್ಕಾಗಿ ಪರಿಹಾರವಾಗಿ ಮುಡಾ 14 ನಿವೇಶನಗಳನ್ನು ಮಂಜೂರು ಮಾಡಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ಸಿಎಂ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳನ್ನು ಮಂಜೂರು ಮಾಡಲು ಯಾವುದೇ ರಾಜಕೀಯ ಒತ್ತಡವಿರಲಿಲ್ಲ ಮತ್ತು ವಿವಿಧ ಹಂತಗಳಲ್ಲಿ ಮುಡಾ ಅಧಿಕಾರಿಗಳು ಅಕ್ರಮಗಳನ್ನು ಮಾಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು 2,500 ಪುಟಗಳ ವರದಿಯನ್ನು ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಅವರಿಗೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ತನಿಖೆಯಲ್ಲಿ 1,000 ಕ್ಕೂ ಹೆಚ್ಚು ನಿವೇಶನಗಳನ್ನು ಮುಡಾ ಅಧಿಕಾರಿಗಳು ಅಕ್ರಮವಾಗಿ ಮಂಜೂರು ಮಾಡಿದ್ದಾರೆ, ಇದರಿಂದಾಗಿ ರಾಜ್ಯ ಬೊಕ್ಕಸಕ್ಕೆ ಭಾರಿ ನಷ್ಟವಾಗಿದೆ ಎಂದು ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ. ಸಿ ಎಂ ಪತ್ನಿ ಪಾರ್ವತಿ ಸ್ವಯಂಪ್ರೇರಣೆಯಿಂದ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ ಮತ್ತು ಸಿದ್ದರಾಮಯ್ಯ ಅವರು ಭೂ ವರ್ಗಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.
ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ಅವರು ವರದಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು. ಈ ವಿಷಯವು ಕೇವಲ ಸಿಎಂ ಕುಟುಂಬದವರ ಭಾಗಿಯಾಗುವಿಕೆ ಬಗ್ಗೆ ಅಲ್ಲ. ಇದು ಮುಡಾ ನಿವೇಶನಗಳ ಹಂಚಿಕೆಯಲ್ಲಿ ನಡೆದಿರುವ ಬೃಹತ್ ಹಗರಣಕ್ಕೆ ಸಂಬಂಧಿಸಿದ್ದಾಗಿದೆ ಎಂದು ಅವರು ಹೇಳಿದರು.
50:50 ಅನುಪಾತದಡಿ ಹಂಚಿಕೆಯಾದ ಎಲ್ಲಾ ನಿವೇಶನಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಅವರು ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ. ಶುಕ್ರವಾರ ಲೋಕಾಯುಕ್ತ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಕೃಷ್ಣ, ತನಿಖೆಯನ್ನು ಸಿಎಂ ಕುಟುಂಬಕ್ಕೆ ಸಂಬಂಧಿಸಿದ 14 ನಿವೇಶನಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಎಂದು ಆರೋಪಿಸಿದರು. ಇತರ ಪ್ರಮುಖ ಅಪರಾಧಿಗಳನ್ನು ಶಿಕ್ಷೆಯಿಂದ ಮುಕ್ತಗೊಳಿಸಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.
ನಿವೇಶನ ಹಂಚಿಕೆ ಅಕ್ರಮಗಳಲ್ಲಿ ಮುಡಾದ ಹಲವಾರು ಅಧಿಕಾರಿಗಳು, ಪ್ರಭಾವಿ ವ್ಯಕ್ತಿಗಳು ಮತ್ತು ಬಿಲ್ಡರ್‌ಗಳು ಭಾಗಿಯಾಗಿದ್ದಾರೆ ಎಂದು ಹೇಳಿದ ಅವರು, ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಪಾತ್ರದ ಬಗ್ಗೆ ವಿವರವಾದ ತನಿಖೆ ನಡೆಸಬೇಕೆಂದು ಕೋರಿದರು. ನಟೇಶ್ ಅವರು ನಿಯಮಗಳನ್ನು ಉಲ್ಲಂಘಿಸಿ ತಮ್ಮ ಕುಟುಂಬ ಸದಸ್ಯರು ಮತ್ತು ಸಂಬಂಧಿಕರಿಗೆ ಅಕ್ರಮವಾಗಿ ನಿವೇಶನಗಳನ್ನು ಮಂಜೂರು ಮಾಡಿದ್ದಾರೆ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.
Advertisement