
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡ ಪರಿಣಾಮ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಹಾಸಹ ಪಡುತ್ತಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಯು ವ್ಯಾಪಕವಾಗಿ ಹರಡುತ್ತಿದ್ದು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಟ್ಟದ ಸುತ್ತ ದಟ್ಟ ಹೊಗೆ ಕಾಣಿಸಿಕೊಂಡಿದೆ.
ಮಾನವ ಕೃತ್ಯ ಶಂಕೆ
ಇನ್ನು ಹಾಲಿ ಬೆಂಕಿ ಅವಘಡವನ್ನು ಮಾನವ ಕೃತ್ಯ ಎಂದು ಶಂಕಿಸಲಾಗಿದ್ದು, 'ಬೀಡಿ, ಸಿಗರೇಟು ಸೇದುವವರು ಬೆಂಕಿಕಡ್ಡಿ ಹಚ್ಚಿ ಸರಿಯಾಗಿ ಆರಿಸದೆ ಬಿಸಾಡಿದ್ದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ' ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ತಾಪ ಹೆಚ್ಚಾಗಿದ್ದು, ಬೇಸಿಗೆ ಆರಂಭವಾಗಿರುವುದರಿಂದ ಕಾಡು ಒಣಗಿದೆ. ಇದೇ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದು ಬೆಂಕಿ ವ್ಯಾಪಿಸಲು ಕಾರಣ ಎಂದು ಹೇಳಲಾಗುತ್ತಿದೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಹಾಸಹ ಪಡುತ್ತಿದ್ದು, ಶೀಘ್ರದಲ್ಲೇ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement