
ಬೆಳಗಾವಿ: ಬೆಳಗಾವಿಯ ಹೊರವಲಯದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲವೆಂದು KSRTC ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸದ್ಯ ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾವಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಮಹಾರಾಷ್ಟ್ರ ಸರ್ಕಾರ ಸ್ಥಗಿತಗೊಳಿಸಿದೆ.
ಸುಳೆಭಾವಿ ಗ್ರಾಮದಲ್ಲಿ ಯುವಕನ ಜೊತೆ ಬಸ್ ಹತ್ತಿದ ಯುವತಿಯೋರ್ವಳು ಮರಾಠಿಯಲ್ಲಿ ಮಾತನಾಡಿದ್ದಳು. ಆಗ ನಾನು ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡು ಎಂದು ಹೇಳಿದ್ದಕ್ಕೆ ಜನರನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು 51 ವರ್ಷದ ಕಂಡಕ್ಟರ್ ಮಹಾದೇವಪ್ಪ ಮಲ್ಲಪ್ಪ ಹುಕ್ಕೇರಿ ತಿಳಿಸಿದ್ದಾರೆ.
ಸದ್ಯ ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ಹೀಗಾಗಿ ಬೆಳಗಾವಿ ಗಡಿವರೆಗೂ ಮಾತ್ರ ಮಹಾರಾಷ್ಟ್ರ ಸಾರಿಗೆ ಬಸ್ಗಳು ಬರುತ್ತಿವೆ. ಆದರೆ ಕರ್ನಾಟಕದಿಂದ ಎಂದಿನಂತೆ ಮಹಾರಾಷ್ಟ್ರದ ವಿವಿಧ ಕಡೆಗೆ ರಾಜ್ಯದ ಸಾರಿಗೆ ಬಸ್ಗಳು ಸಂಚಾರ ಮಾಡುತ್ತಿವೆ.
ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಪ್ರಕರಣಕ್ಕೆ ಶನಿವಾರ ಹೊಸ ತಿರುವು ಪಡೆದುಕೊಂಡಿದ್ದು, ಕಂಡಕ್ಟರ್ ನನ್ನ ಮೇಲೆ ಲೌಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಯುವತಿ ನೀಡಿದ ದೂರಿನ ಅನ್ವಯ ಮಹಾದೇವಪ್ಪ ಹುಕ್ಕೇರಿ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ.
ಪೊಲೀಸರ ನಡೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕರವೇ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ವಿರುದ್ಧವೇ ಘೋಷಣೆ ಕೂಗಿದ್ದಾರೆ. ಮತ್ತೊಂದೆಡೆ ಎಂಇಎಸ್ ಪ್ರತಿಕೃತಿಗೆ ಬೆಂಕಿ ಹಚ್ಚಿ, ರಾಜ್ಯ ಹೆದ್ದಾರಿ ತಡೆದ ಕರವೇ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement