ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ತಂದಿಟ್ಟಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಹೆಚ್ ಡಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕುಮಾರಸ್ವಾಮಿ ಅವರು 2006ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫಿಕೇಶನ್ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಹಲಗೆವಡೇರಹಳ್ಳಿ ಸರ್ವೆ ನಂ. 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ದಾಖಲೆಗಳ ಸಮೇತ ಮಹದೇವಸ್ವಾಮಿ 2012ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
ಮತ್ತೊಂದು ಪ್ರಕರಣದಲ್ಲಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ.
ರಾಜ್ಯದ ಶಕ್ತಿ ಯೋಜನೆಯನ್ನ ಡಯಾಲಿಸ್ ಗೆ ಒಳಗಾಗಿರುವ ಗಂಡಸರಿಗೂ ವಿಸ್ತರಿಸುವಂತೆ ಒತ್ತಾಯ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸಿಎಂಗೆ ಪತ್ರ ಬರೆದಿದ್ದಾರೆ. ವಾರಕ್ಕೆ 2-3 ಬಾರಿ ಡಯಾಲಿಸಿಸ್‌ಗಾಗಿ ಪುರುಷ ರೋಗಿಗಳು ಸಂಚಾರ ಮಾಡುವುದರಿಂದ ಹೆಚ್ಚು ಖರ್ಚಾಗುತ್ತದೆ. ಹೀಗಾಗಿ ಅಂತವರಿಗೆ ಅನೂಕೂಲ ಆಗುವ ನಿಟ್ಟಿನಲ್ಲಿ, ಶಕ್ತಿ ಯೋಜನೆ ವ್ಯಾಪ್ತಿಗೆ ತರಬೇಕೆಂದು ಆರ್‌ಟಿಐ ಕಾರ್ಯಕರ್ತ ಸೈಯದ್ ರೆಹಮಾನ್ ಸಮೀನ್, ಸ್ಪೀಕರ್ ಯು.ಟಿ.ಖಾದರ್‌ಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಗೆ ಖಾದರ್ ಪತ್ರ ಬರೆದಿದ್ದಾರೆ.
ಇನ್ನು SSLC (10ನೇ ತರಗತಿ) ಮತ್ತು ದ್ವಿತೀಯ ಪಿಯುಸಿ (12ನೇ ತರಗತಿ) ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಸಮಯದಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಘೋಷಿಸಿದೆ.
ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಹೊರೆಯಾಗಿವೆ ಎಂಬ ಮಾತುಗಳು ಕಾಂಗ್ರೆಸ್ ಸರ್ಕಾರದ ಸಚಿವರಿಂದಲೇ ಬರುತ್ತಿವೆ.
ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಪರಮೇಶ್ವರ ಅವರೇ ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದು ಎಂದು ಹೇಳಿದ್ದಾರೆ. 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಪರಮೇಶ್ವರ ನೇತೃತ್ವದ ಸಮಿತಿ ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆಗಳ ವಿವರಗಳನ್ನು ತಿಳಿದಿರಬೇಕಿತ್ತು. ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ ಎಂದು ಯಾವ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ,’’ ಎಂದು ಹೇಳಿದ್ದಾರೆ.
ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ಮತ್ತು ಹಣಕಾಸಿನ ನೆರವು ನೀಡಲು ಮನವಿ ಸಲ್ಲಿಸಿದ್ದಾರೆ.
ಈಗಾಗಲೇ ಅಸ್ತಿತ್ವದಲ್ಲಿರುವ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅನುಮೋದನೆ ಮತ್ತು ಹಣ ಬಿಡುಗಡೆಗೂ ಮನವಿ ಮಾಡಿದರು. ಈ ಸಂಬಂಧ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ 11,123 ಕೋಟಿ ರೂ.ಗಳ ಅಂದಾಜು ವೆಚ್ಚದ ಆರು ಹೊಸ ನೀರಾವರಿ ಯೋಜನೆಗಳಿಗೆ ಅನುದಾನ ಕೋರಿದ್ದಾರೆ. ಉದ್ದೇಶಿತ ಯೋಜನೆಗಳಿಂದ ವಿಜಯಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ.
ಮಾಹಿತಿ ತಂತ್ರಜ್ಞಾನ ಇಲಾಖೆ ಆಶ್ರಯದಲ್ಲಿ ಫೆ. 27ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಗೆಫೆಕ್ಸ್ (GAFX) 2025 ಶೃಂಗಸಭೆ ನಡೆಯಲಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ದೇಶದ ಪ್ರಮುಖ ಎವಿಜಿಸಿ-ಎಕ್ಸ್‌ಆರ್ (AVGC-XR) ಸಮ್ಮೇಳನ ವಿಶ್ವದ ನಂಬರ್ 1 ಎವಿಜಿಸಿ ಕೇಂದ್ರವಾಗಿ ಹಾಗೂ ಮಾಧ್ಯಮ ಮತ್ತು ಮನರಂಜನೆಯ ಕ್ಷೇತ್ರದಲ್ಲಿ ಭಾರತದ ಜಾಗತಿಕ ನಾಯಕತ್ವದ ಹಿಂದಿನ ಚಾಲಕ ಶಕ್ತಿಯಾಗಿ ಬೆಂಗಳೂರಿನ ಸ್ಥಾನವನ್ನು ಭದ್ರವಾಗಿಸುತ್ತ ಮಹತ್ವದ ಹೆಜ್ಜೆಯಾಗಿದೆ. 20,000ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ
Advertisement