ರಾಯಚೂರಿನ ಮಾನ್ವಿ ತಾಲ್ಲೂಕು, ಚಿಕ್ಕಬಳ್ಳಾಪುರ ತಾಲ್ಲೂಕು ಮತ್ತು ಬಳ್ಳಾರಿಯ ಸಂಡೂರು ತಾಲ್ಲೂಕಿನಲ್ಲಿ ಕೋಳಿಗಳಲ್ಲಿ ಹಕ್ಕಿ ಜ್ವರ ಕಂಡುಬಂದಿದ್ದು, ಹಲವಾರು ಕೋಳಿಗಳು ಸಾವಿಗೀಡಾಗಿವೆ. ಆದರೆ, ರಾಜ್ಯದಲ್ಲಿ ಈವರೆಗೆ ಮನುಷ್ಯರಲ್ಲಿ ಹಕ್ಕಿಜ್ವರ ಪತ್ತೆಯಾಗಿರುವ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶು ಸಂಗೋಪನಾ ಇಲಾಖೆ ಸತ್ತ ಕೋಳಿಗಳ ಮಾದರಿಗಳನ್ನು ಸಂಗ್ರಹಿಸಿ ಭೋಪಾಲ್‌ನ ಕೇಂದ್ರ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಹಕ್ಕಿ ಜ್ವರದಿಂದ ಪಕ್ಷಿಗಳು ಸಾವಿಗೀಡಾಗಿರುವುದಾಗಿ ದೃಢಪಟ್ಟಿದೆ. ರಾಜ್ಯದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಿರುವ ಆರೋಗ್ಯ ಇಲಾಖೆ, ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದ ಸ್ಥಳದ ಸುತ್ತಲಿನ 3 ಕಿ.ಮೀ ಪ್ರದೇಶದಲ್ಲಿನ ಕೋಳಿಗಳನ್ನು ಸಾಮೂಹಿಕವಾಗಿ ಕೊಲ್ಲಲು ನಿರ್ಧರಿಸಿದೆ.
ಕೆಎಸ್ಆರ್ ಟಿಸಿ ಬಸ್ ಗಳ ಮೇಲೆ ಮರಾಠಿಗರ ದಾಳಿ ಹಾಗೂ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸಾಲು ಸಾಲು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 7 ರಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದ್ದು, ಇದಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಅಲ್ಲದೆ ಮಾರ್ಚ್ 11 ರಂದು ಮೇಕೆದಾಟಿಗಾಗಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್, ಮಾರ್ಚ್ 14 ರಾಮನಗರ ಮಂಡ್ಯ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ಮತ್ತು ಮಾ.17 ರಂದು ಹೊಸಕೋಟೆ – ಚೆನ್ನೈ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಲಾಗಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 15 ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಯಡಿಯೂರಪ್ಪ ಜತೆ ಸಹ-ಆರೋಪಿಗಳಾದ ವೈ.ಎಂ. ಅರುಣಾ, ರುದ್ರೇಶ ಮತ್ತು ಮರುಳಸಿದ್ಧಯ್ಯ ಜಿ. ಮರಿಸ್ವಾಮಿ ಅವರಿಗೂ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಮಾರ್ಚ್ 15ರಂದು ವಿಚಾರಣೆ ನಿಗದಿಪಡಿಸಿದೆ.
ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆ ಬಳಕೆ ಆರೋಗ್ಯಕ್ಕೆ ಹಾನಿಕರ ಎನ್ನುವುದು ದೃಢಪಟ್ಟ ಬೆನ್ನಲ್ಲೇ ಹಸಿರು ಬಟಾಣಿ ಕೂಡ ಅಸುರಕ್ಷಿತ ಎಂಬುದು ಆಹಾರ ಇಲಾಖೆ ನಡೆಸಿದ ಪರೀಕ್ಷೆಯಿಂದ ದೃಢಪಟ್ಟಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿನ ಸುಮಾರು 36 ಮಾದರಿಯ ಹಸಿರು ಬಟಾಣಿ ಮಾದರಿಗಳನ್ನು ಸಂಗ್ರಹಿಸಿದ್ದ ಆಹಾರ ಇಲಾಖೆ ಅವುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು. ಅದರಲ್ಲಿ 28 ಕ್ಕೂ ಹೆಚ್ಚು ಹಸಿರು ಬಟಾಣಿ ಮಾದರಿಗಳು ಅಸುರಕ್ಷಿತ ಎಂಬ ವಿಚಾರ ತಿಳಿದುಬಂದಿದೆ. ಬಟಾಣಿ ಹಸಿರಾಗಿ ಕಾಣಲು ಕೃತಕ ಬಣ್ಣ ಬಳಸಲಾಗುತ್ತಿದೆ.
ಬಟಾಣಿಯಲ್ಲಿ ಬಣ್ಣ ಬಳಕೆ ಮಾಡುತ್ತಿರುವುದರಿಂದ ಕಿಡ್ನಿಯ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ಬಹಿರಂಗಗೊಂಡಿದೆ. ಅಲ್ಲದೆ, ಟ್ಯಾಟೂನಿಂದಲೂ ಎಚ್ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವರು, ಟ್ಯಾಟೂನಿಂದ ಆರೋಗ್ಯ ಸಮಸ್ಯೆಗಳ ಸಾಧ್ಯತೆ ವಿಚಾರವಾಗಿ ಕೇಂದ್ರ ಸರ್ಕಾರ ನಿಯಮ ರೂಪಿಸಲು ಅವಕಾಶ ಇದೆ. ಟ್ಯಾಟೂ ಇಂಕ್ ಅನ್ನು ಕಾಂತಿ ವರ್ಧಕಗಳ ಅಡಿಯಲ್ಲಿ ತರಲು ಕೇಂದ್ರಕ್ಕೆ ಪತ್ರ ಬರೆಯಲಾಗುವುದು. ನಂತರ ಟ್ಯಾಟೂ ಪಾರ್ಲರ್ ಗಳನ್ನು ನಿಯಂತ್ರಿಸಲು ಕಾನೂನು ರೂಪಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮುಂಬರುವ ರಾಜ್ಯ ಬಜೆಟ್‌ನಲ್ಲಿ ನಗರದ ಅಭಿವೃದ್ಧಿಗೆ ಹೆಚ್ಚಿನ ಹಣ ಹಂಚಿಕೆ ಮಾಡುವಂತೆ ಮನವಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ನೇತೃತ್ವದ ಬಿಜೆಪಿ ನಿಯೋಗವು ನಗರದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 150 ಕೋಟಿ ರೂ. ಅನುದಾನ ನೀಡುವಂತೆ ಆಗ್ರಹಿಸಿದೆ. ಮೆಟ್ರೋ ದರ ಹೆಚ್ಚಳ, ಮೊದಲ ಬಾರಿಗೆ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಹಣ ಹಂಚಿಕೆ ಮತ್ತು ಬಿಬಿಎಂಪಿ ಚುನಾವಣೆಯನ್ನು ಆದಷ್ಟು ಬೇಗ ನಡೆಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಿಎಂ ಜೊತೆ ಚರ್ಚಿಸಲಾಗಿದೆ.
Advertisement