
ಬೆಂಗಳೂರು: ಸಿವಿಲ್ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ(ಸಿಐಡಿ)ಗೆ ವಹಿಸಲಾಗಿದ್ದು, ಅದರ ವರದಿಗಾಗಿ ಕಾಯಲಾಗುತ್ತಿದೆ ಎಂದರು.
ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿಲ್ಲ. ಅದರಲ್ಲಿ ಅವರ ಪಾತ್ರವಿಲ್ಲ. ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಆದರೂ ರಾಜೀನಾಮೆ ನೀಡುವಂತೆ ಪ್ರತಿಪಕ್ಷಗಳು ಕೇಳುತ್ತಿವೆ ಎಂದರು.
ಬೀದರ್ ಜಿಲ್ಲೆಯ ಸಿವಿಲ್ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ, ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದೆ.
ರಾಜು ಕಪನೂರ್ ಅವರು ತನಗೆ ಒಂದು ಕೋಟಿ ರೂಪಾಯಿ ನೀಡುವಂತೆ ಪೀಡಿಸಿದ್ದಾರೆ ಎಂದು ಪಾಂಚಾಲ್ ಅವರು ತಮ್ಮ ಆತ್ಮಹತ್ಯೆ ಪತ್ರದಲ್ಲಿ ಆರೋಪಿಸಿದ್ದು, ಈ ಆರೋಪವನ್ನು ಅವರು ನಿರಾಕರಿಸಿದ್ದಾರೆ.
ಕಪನೂರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಖರ್ಗೆ ಅವರ ಆಪ್ತರು ಎಂದು ಬಿಜೆಪಿ ಆರೋಪಿಸಿದೆ.
40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರೊಬ್ಬರು ಹೇಳಿದ್ದಕ್ಕೆ ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಪ್ರಿಯಾಂಕ್ ಖರ್ಗೆ ಏಕೆ ರಾಜೀನಾಮೆ ನೀಡುತ್ತಿಲ್ಲ? ಎಂಬ ಬಿಜೆಪಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಅವರೇಕೆ ರಾಜೀನಾಮೆ ನೀಡಬೇಕು?" ಸೂಸೈಡ್ ನೋಟ್‌ನಲ್ಲಿ ಈಶ್ವರಪ್ಪ ಅವರ ಹೆಸರಿತ್ತು. ಹೀಗಾಗಿ ರಾಜೀನಾಮೆ ನೀಡಿದ್ದರು ಎಂದು ತಿರುಗೇಟು ನೀಡಿದರು.
ಆತ್ಮಹತ್ಯೆ ಪತ್ರದಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆಯೇ? ಅವರ ಹೆಸರನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಈ ಸಂಬಂಧ ಯಾವುದೇ ತನಿಖೆಗೂ ಸಿದ್ಧ ಎಂದು ಸಚಿವರು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.
ದೂರಿನ ಆಧಾರದ ಮೇಲೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಒಮ್ಮೆ ವರದಿ ಸಲ್ಲಿಕೆಯಾದ ನಂತರ ಪ್ರಿಯಾಂಕ್ ಖರ್ಗೆ ಏನಾದರೂ ತಪ್ಪು ಮಾಡಿದ್ದಾರೆಯೇ ಎಂದು ನೋಡುತ್ತೇವೆ. ಸದ್ಯಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ, ದಾಖಲೆ ಇಲ್ಲ ಮತ್ತು ಅವರ ಹೆಸರನ್ನು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಸಿಬಿಐ ತನಿಖೆಗೆ ಬಿಜೆಪಿ ಆಗ್ರಹದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕೇಸರಿ ಪಕ್ಷಕ್ಕೆ ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಿರಲಿಲ್ಲ. ಬಿಜೆಪಿಗೆ ಈಗ ಸಿಬಿಐ ಒಪ್ಪಿಸುವಂತೆ ಕೇಳಲು ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದರು.
ಇದೇ ವೇಳೆ ಹೊಸ ವರ್ಷದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Advertisement