
ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆಂದು ದಾಂಧಲೆ ನಡೆಸಿ, ಮಠದ ಸಿಬ್ಬಂದಿ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಬಂಧನಕ್ಕೊಳಪಡಿಸಲಾಗಿದೆ.
ಡಿ.29 ರಂದು ರಾತ್ರಿ ಈ ಘಟನೆ ನಡೆದಿದ್ದು, ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೆಂದರ್, ರವಿಕಾಂತ್ ಬಂಧಿತರು.
ಶ್ರೀಕೃಷ್ಣಮಠದ ಒಳಗೆ ಹಾಗೂ ಹೊರಗೆ ತೀವ್ರ ಜನಸಂದಣಿಯಿಂದ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ದೇವರ ದರ್ಶನಕ್ಕೆಂದು ಬಂದಿದ್ದ ಸುಮಾರು 7-8 ಜನ ಅಯ್ಯಪ್ಪ ಮಾಲಾಧಾರಿಗಳು ದಾಂಧಲೆ ನಡೆಸಿದ್ದರು ಎನ್ನಲಾಗಿದೆ.
ರಥ ಬೀದಿಯಲ್ಲಿ ನಡೆಯುವ ರಥೋತ್ಸವದ ದೇವರ ಉತ್ಸವ ಮೂರ್ತಿ ಪಲ್ಲಕ್ಕಿಯೊಂದಿಗೆ ಕೃಷ್ಣಮಠದ ಮುಂಭಾಗದಿಂದ ಒಳಭಾಗಕ್ಕೆ ಬರುವ ವೇಳೆ ದಾಂಧಲೆ ನಡೆಸಿದ್ದರು. ಅಷ್ಟೇ ಅಲ್ಲದೆ, ಕೃಷ್ಣಮಠದ ಸಿಬ್ಬಂದಿ ಜಗದೀಶ ಎಂಬುವವರ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ.
ಜಗದೀಶ್ ಅವರನ್ನು ಎಲ್ಲರೂ ಸೇರಿ ಮೇಲೆತ್ತಿಕೊಂಡು ಶ್ರೀಕೃಷ್ಣ ಮಠದ ಗರ್ಭಗುಡಿಯ ಒಳಗಡೆ ಬಂದಿದ್ದು, ಈ ವೇಳೆ ಮಠದ ದಿವಾನ ನಾಗರಾಜ ಆಚಾರ್ಯ ಅವರು ಅಯ್ಯಪ್ಪ ಮಾಲಾಧಾರಿಗಳನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ವೇಲೆ ಅವರ ಮೇಲೂ ಹಲ್ಲೆಗೆ ಯತ್ನಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಮಠದಲ್ಲಿ ಭದ್ರತಾ ಕರ್ತವ್ಯ ಹಾಗೂ ಪಿಆರ್‌ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ಟೇಬಲ್ ರವೀಂದ್ರ ಗಲಾಟೆ ಮಾಡದಂತೆ ಅಯ್ಯಪ್ಪ ಮಾಲಾಧಾರಿಗಳನ್ನು ಸಮಾಧಾನ ಪಡಿಸಿ ತಡೆಯಲು ಹೋಗಿದ್ದಾರೆ. ಈವೇಳೆ ಪೊಲೀಸ್ ಸಿಬ್ಬಂದಿ ಮೇಲು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಕಾನ್ಸ್ಟೇಬಲ್ ರವೀಂದ್ರ ನೀಡಿದ ದೂರಿನನ್ವಯ ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ 115(2), 121(1), 132, 189(2), 190, ಮತ್ತು 191(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿ, ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇದನ್ನು ಸಾಬೀತುಪಡಿಸಲು ಸಿಸಿಟಿವಿ ದೃಶ್ಯಾವಳಿಗಳಿವೆ ಮತ್ತು ಪ್ರಕರಣದಲ್ಲಿ ಯಾವುದೇ ತೀರ್ಮಾನಕ್ಕೆ ಬರುವ ಮೊದಲು ತನಿಖಾಧಿಕಾರಿ ಅದನ್ನು ಪರಿಶೀಲಿಸಬೇಕು ಎಂದು ಮಠದ ಸಿಬ್ಬಂದಿಗಳು ತಿಳಿಸಿದ್ದಾರೆ
Advertisement