
ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ಪ್ರತಿ ವರ್ಷ ನೀಡುವ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ, ವಿಶೇಷ ಪ್ರಶಸ್ತಿ ಮತ್ತು ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ರಾಜ್ಯ ಕೈಗಾರಿಕಾ ವಲಯಕ್ಕೆ ನೀಡುತ್ತಿರುವ ಉತ್ತೇಜನವನ್ನು ಪರಿಗಣಿಸಿ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಪ್ರಯುಕ್ತ ಇಂಧನ ಸಚಿವ ಕೆಜೆ ಜಾರ್ಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಳಾಕರ್ ಹಾಗೂ ಆಹಾರ ಸಚಿವ ಕೆಎಚ್ ಮುನಿಯಪ್ಪ ಅವರನ್ನು ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬೆಂಗಳೂರು ಪ್ರೆಸ್ ಕ್ಲಬ್ ಪ್ರಕಟಣೆಯಲ್ಲಿ ತಿಳಿಸಿದೆ.
ಜನವರಿ 12 ರಂದು ಸಂಜೆ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ 50 ಸಾಧಕ ಪತ್ರಕರ್ತರನ್ನು ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Advertisement