
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 13 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಶಾಸಕ ಮಂಜುನಾಥ್ ಅವರು ಶನಿವಾರ ಸಿದ್ಧತೆಗಳನ್ನುಪರಿಶೀಲಿಸಿದರು.
ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತದಿಂದ ಈಗಾಗಲೇ ಸಿದ್ದತೆ ಆರಂಭವಾಗಿದೆ. ಹನೂರು ಶಾಸಕ ಮಂಜುನಾಥ್ ಅವರು ಸ್ಥಳ ಪರಿಶೀಲನೆ ಮಾಡಿದ್ದಾರೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ತಿಳಿಸಿದ್ದಾರೆ.
ಬೆಳಗಾವಿ, ಕಲಬುರಗಿ ನಂತರ ಇದೀಗ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಗಿರಿಜನರಿಗೆ ವಸತಿ ಸೇರಿದಂತೆ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ ಇದೆ.
''ನಂಜುಂಡಪ್ಪ ವರದಿ ಪ್ರಕಾರ ಚಾಮರಾಜನಗರ ಹಿಂದುಳಿದ ಜಿಲ್ಲೆಯಾಗಿದೆ. ಆದರೆ ಜಿಲ್ಲೆಯ ಅಭಿವೃದ್ಧಿಗೆ ಈವರೆಗೂ ಸರಕಾರದಿಂದ ವಿಶೇಷ ಅನುದಾನ ದೊರೆತ್ತಿಲ್ಲ. ಹಾಗಾಗಿ ಮಾದಪ್ಪನ ಕ್ಷೇತ್ರದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ ಅದರಲ್ಲೂ ಹನೂರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಲಭಿಸುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಸಭೆಯ ಯಶಸ್ವಿಗೆ ಎಲ್ಲಾಅಧಿಕಾರಿಗಳು ಯಾವುದೇ ರೀತಿಯ ಲೋಪವಾಗದಂತೆ ಕರ್ತವ್ಯವನ್ನು ನಿರ್ವಹಿಸಬೇಕು'' ಎಂದು ಶಾಸಕ ಮಂಜುನಾಥ್ ಅವರು ಹೇಳಿದ್ದಾರೆ.
Advertisement