
ಬೆಂಗಳೂರು: ಪಾಲಿಕೆಯ ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಶುಕ್ರವಾರ ಸೂಚನೆ ನೀಡಿದೆ.
ಮಲ್ಲೇಶ್ವರದಲ್ಲಿರುವ ಪಶ್ಚಿಮ ವಲಯ ಕಚೇರಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆಗೆ’ ಕಾರ್ಯಕ್ರಮದಲ್ಲಿ ಶುಕ್ರವಾರ ನಾಗರಿಕರಿಂದ ಅಹವಾಲು ಸ್ವೀಕರಿಸಿದ ವೇಳೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.
ಬೀದಿ ಬದಿ ವ್ಯಾಪಾರಿಗಳು, ವ್ಯಾಪಾರ ವಲಯವನ್ನು ಗುರುತಿಸುವವರೆಗೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಆಯುಕ್ತರು, ಪಶ್ಚಿಮ ವಲಯದಲ್ಲಿ ಈಗಾಗಲೇ ಸುಮಾರು 7,000 ಬೀದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಪಾಲಿಕೆ ವತಿಯಿಂದ ವೆಂಡಿಂಗ್ ಜೋನ್‌ಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಇವುಗಳನ್ನು ಗುರುತಿಸುವವರೆಗೆ ಯಾವ ಯಾವ ರಸ್ತೆಗಳಲ್ಲಿ ವಹಿವಾಟು ಮಾಡಬಹುದು ಎಂಬುದನ್ನು ಪರಿಶೀಲಿಸಿ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪಾದಚಾರಿ ಮಾರ್ಗದಲ್ಲಿ ಶಾಶ್ವತ ಪೆಟ್ಟಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರೆ ಅದನ್ನು ಕೂಡಲೇ ತೆರವುಗೊಳಿಸಬೇಕು. ಪಾದಚಾರಿಗಳ ಓಡಾಟಕ್ಕೆ ಅವಕಾಶವಿರಬೇಕು. ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವಂತಿಲ್ಲ. ಇದರ ಜೊತೆಗೆ ಪಾದಚಾರಿ ಮಾರ್ಗದಲ್ಲಿ ಬರುವ ಅಂಗಡಿ/ಮುಂಗಟ್ಟುಗಳ ಮುಂಭಾಗದ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿರುವುದನ್ನು ಪರಿಶೀಲಿಸಿ ತೆರವುಗೊಳಿಸಬೇಕೆಂದು ಸೂಚನೆ ನೀಡಿದರು.
Advertisement