
ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರೂ ಎಚ್ಚೆತ್ತುಕೊಳ್ಳದ ಸರ್ಕಾರ ಕ್ರಮ ಕೈಗೊಳ್ಳಲು ತಾತ್ಸಾರ ಧೋರಣೆ ತಾಳಿದೆ. ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರು, ಬಡವರ ಶಾಪ ತಟ್ಟಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಒಂದು ವೇಳೆ ಮನುಷ್ಯತ್ವ ಹೊಂದಿದ್ದರೆ ಅಥವಾ ತಮ್ಮ ಸ್ಥಾನದ ಮೇಲೆ ಗೌರವಿದ್ದರೆ ಕೂಡಲೇ ಮೃತಪಟ್ಟ ಬಾಣಂತಿಯರ ಕುಟುಂಬಕ್ಕೆ ತಲಾ ರೂ. 25 ಲಕ್ಷ ಪರಿಹಾರ ಘೋಷಿಸಿಸಬೇಕು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ರಾಜೀನಾಮೆ ಪಡೆಯಬೇಕು. ತಾಯಿ ಕಳೆದುಕೊಂಡ ಮಕ್ಕಳನ್ನು ಸರ್ಕಾರ ದತ್ತು ಪಡೆಯಬೇಕು ಎಂದು ಆಗ್ರಹಿಸಿದರು.
ಬಾಣಂತಿಯರ ಸಾವು ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ ವಿಜಯೇಂದ್ರ, ಮೃತ ಬಾಣಂತಿಯರ ಕುಟುಂಬಗಳಿಗೆ ನ್ಯಾಯ ದೊರಕಿಸಲು ಬಿಜೆಪಿ ಹೋರಾಟ ಮಾಡಲಿದ್ದು, ಸರ್ಕಾರ ಎಚ್ಚೆತ್ತು, ವಿಳಂಬವಿಲ್ಲದೆ ಅವರ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.
Advertisement