
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ ಉದ್ಘಾಟನೆ ಸಮಾರಂಭ ಜನವರಿ 15 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಜನವರಿ 14 ಮತ್ತು 15 ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಸೋಮವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರಕ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ.
ಕೇವಲ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅಷ್ಟೇ ಅಲ್ಲದೆ, ಪರಮೇಶ್ವರ, ಸಿಎಂ ಆಪ್ತ ಸಚಿವರು ಕೂಡ ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹೈಕಮಾಂಡ್ ನಾಯಕರ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇಂದಿರಾ ಗಾಂಧಿ ಭವನ ಉದ್ಘಾಟನೆ ಕಾರ್ಯಕ್ರಮ ದೆಹಲಿಯ ಕೋಟ್ಲಾ ರಸ್ತೆಯ 9ಎನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಹಿಸಲಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಸಂಸದರು ಮತ್ತು ಪ್ರಮುಖ ಕಾಂಗ್ರೆಸ್ ವ್ಯಕ್ತಿಗಳು ಸೇರಿದಂತೆ ದೇಶಾದ್ಯಂತದ ಸುಮಾರು 400 ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಆಡಳಿತಾತ್ಮಕ, ಸಾಂಸ್ಥಿಕ ಮತ್ತು ಕಾರ್ಯತಂತ್ರದ ಚಟುವಟಿಕೆಗಳನ್ನು ಬೆಂಬಲಿಸಲು ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಪಕ್ಷದ ವಿಕಸನಗೊಳ್ಳುತ್ತಿರುವ ಅಗತ್ಯಗಳನ್ನು ಪೂರೈಸಲು ‘ಇಂದಿರಾ ಗಾಂಧಿ ಭವನ’ವನ್ನು ವಿನ್ಯಾಸಗೊಳಿಸಲಾಗಿದೆ.
2009ರ ಡಿಸೆಂಬರ್ ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ಅವರು ಈ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಆರ್ಥಿಕ ಸವಾಲುಗಳು ಮತ್ತು ರಾಜಕೀಯ ಬದಲಾವಣೆಗಳಿಂದಾಗಿ ನಿರ್ಮಾಣವು ವಿಳಂಬವನ್ನು ಎದುರಿಸಿದರೂ, ಕಟ್ಟಡದ ನಿರ್ಮಾಣ ಕಾರ್ಯ ಇದೀಗ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ.
Advertisement