ʼಮನೆಗೊಂದು ಗ್ರಂಥಾಲಯʼ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮರೆಯಾಗುತ್ತಿರುವ ಪುಸ್ತಕ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿಯೂ ಒಂದು ಪುಟ್ಟ ಗ್ರಂಥಾಲಯ ಕಟ್ಟುವುದು ಈ ಯೋಜನೆಯ ಕನಸಾಗಿದೆ.
CM Siddaramaiah
ಸಿಎಂ ಸಿದ್ದರಾಮಯ್ಯ ಮತ್ತಿತರರು
Updated on

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಮನೆಗೊಂದು ಗ್ರಂಥಾಲಯ" ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರ ಪ್ರಕಟಿಸಿರುವ ಕುಮಾರವ್ಯಾಸ ಭಾರತ ಸಂಪುಟಗಳನ್ನು ಅವರು ಲೋಕಾರ್ಪಣೆಗೊಳಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿರುವ ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ.ಹಂಪ ನಾಗರಾಜಯ್ಯ ಅವರು ಚಾಲನೆ ನೀಡಿದರು. ಇದೇ ವೇಳೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಗ್ರಂಥಾಲಯದ ಫಲಕವನ್ನು ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮರೆಯಾಗುತ್ತಿರುವ ಪುಸ್ತಕ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿಯೂ ಒಂದು ಪುಟ್ಟ ಗ್ರಂಥಾಲಯ ಕಟ್ಟುವುದು ಈ ಯೋಜನೆಯ ಕನಸಾಗಿದೆ. ಮನೆಗಳಲ್ಲಿ, ಸಂಘ ಸಂಸ್ಥೆಗಳಲ್ಲಿ, ಕಚೇರಿಗಳಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಬೇಕು ಎಂದರು.

ಮನೆಯ ಮಾಲೀಕರು 100 ಪುಸ್ತಗಳಿಂದ ಆರಂಭಿಸಿ ಗ್ರಂಥಾಲಯವನ್ನು ಸ್ಥಾಪನೆ ಮಾಡಬೇಕು. ಪುಸ್ತಕಗಳ ಖರೀದಿ ಹಾಗೂ ಅವುಗಳನ್ನು ಸುಸಜ್ಜಿತವಾಗಿ ಇಡುವ ಜವಾಬ್ದಾರಿ ಮನೆಯ ಮಾಲೀಕರದ್ದಾಗಿರುತ್ತದೆ. ಸದರಿ ಗ್ರಂಥಾಲಯವನ್ನು ಗಣ್ಯರು, ವಿದ್ವಾಂಸರುಗಳು, ಕಲಾವಿದರುಗಳಿಂದ ಉದ್ಘಾಟನೆಯನ್ನು ಮಾಡಿಸುವ ಜವಾಬ್ದಾರಿ ಪ್ರಾಧಿಕಾರದ್ದಾಗಿದೆ ಎಂದು ತಿಳಿಸಿದರು.

ಪ್ರಚಾರದ ಜವಾಬ್ದಾರಿಯನ್ನು ಪ್ರಾಧಿಕಾರವೇ ವಹಿಸಲಿದೆ. ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಗ್ರಂಥಾಲಯ ಜಾಗೃತ ಸಮಿತಿ ರಚನೆ ಮಾಡಲಾಗುವುದು, ಗ್ರಂಥಾಲಯ ಸ್ಥಾಪಿಸಲು ಪ್ರೋತ್ಸಾಹ ನೀಡುವುದು, ಅದರ ಜೊತೆ ನಿಕಟ ಸಂಪರ್ಕ ಇಟ್ಟುಕೊಳ್ಳುವುದು ಸಮಿತಿಯ ಜವಾಬ್ದಾರಿಯಾಗಿರುತ್ತದೆ ಎಂದರು.

ಕುಮಾರವ್ಯಾಸ ಎಂದೇ ಪ್ರಖ್ಯಾತರಾದ ಗದುಗಿನ ನಾರಾಣಪ್ಪ ರಚಿಸಿದ ʼಕರ್ಣಾಟ ಭಾರತ ಕಥಾಮಂಜರಿ' ಕುಮಾರವ್ಯಾಸ ಭಾರತ ಎಂದೇ ಪ್ರಖ್ಯಾತವಾಗಿದೆ. ಕನ್ನಡ ಸಾಹಿತ್ಯ ಲೋಕದ ಅಜರಾಮರ ಕೃತಿಯಾದ ಕುಮಾರವ್ಯಾಸ ಭಾರತವನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಓದುಗರಿಗೆ ಒದಗಿಸಲಾಗುವುದೆಂದು ಸುವರ್ಣ ಸಂಭ್ರಮ ಕಾರ್ಯಕ್ರಮದ ನಿಮಿತ್ತ ಕಳೆದ ವರ್ಷ ಗದಗಿನಲ್ಲಿ ಆಚರಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರು ಘೋಷಿಸಿದ್ದರು. ಅದರಂತೆ ಕನ್ನಡ ಗಣಕ ಪರಿಷತ್ತು ಈ ಹಿಂದೆ ಪ್ರಕಟಿಸಿದ್ದ ಕುಮಾರವ್ಯಾಸ ಭಾರತದ ಕೃತಿಯ ಹಕ್ಕುಗಳನ್ನು ಪುಸ್ತಕ ಪ್ರಾಧಿಕಾರ ಪಡೆದುಕೊಂಡು ಈ ಕೃತಿಯನ್ನು ಪ್ರಕಟಿಸಿದೆ ಎಂದು ವಿವರಿಸಿದರು.

ಕನ್ನಡ ಪುಸ್ತಕ ಪ್ರಾಧಿಕಾರ ಈ ಕುಮಾರವ್ಯಾಸ ಭಾರತವನ್ನು ಎರಡು ಸಂಪುಟಗಳಲ್ಲಿ ಪ್ರಕಟಿಸಿದೆ. ಈ ಎರಡೂ ಸಂಪುಟಗಳಿಗೆ ಒಟ್ಟು ರೂ.500 ಬೆಲೆ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com