ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬದಲಾವಣೆ ವಿಷಯವಾಗಿ ನಡೆಯುತ್ತಿರುವ ಚರ್ಚೆ, ಊಹಾಪೋಹಗಳಿಗೆ ಕಾಂಗ್ರೆಸ್ ನ ಹೈಕಮಾಂಡ್ ತೆರೆ ಎಳೆದಿದೆ.
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಸಭೆ ಬಳಿಕ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಾಣೆ ಕುರಿತು ವ್ಯಾಪಕ ಊಹಾಪೋಹಗಳು ಕೇಳಿಬರುತ್ತಿದೆ. ಕಾಂಗ್ರೆಸ್ ಸರ್ಕಾರ, ಒಗ್ಗಟ್ಟಾಗಿದೆ ಮತ್ತು ಪ್ರತಿಪಕ್ಷಗಳು ಸರ್ಕಾರದ ಮೇಲೆ ಇಲ್ಲ ಸಲ್ಲದ ಕಥೆಗಳನ್ನು ಹೆಣೆಯುತ್ತಿವೆ ಸಿಎಂ ಬದಲಾವಣೆ ಇಲ್ಲ. ಕಾಂಗ್ರೆಸ್‌ನೊಳಗಿನ ಅಧಿಕಾರದ ಗುದ್ದಾಟ ಕೇವಲ ಮಾಧ್ಯಮ ಸೃಷ್ಟಿ ಎಂದು ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಖಾತರಿ ಯೋಜನೆ ಭಾರತದ ಅತಿದೊಡ್ಡ ಕಲ್ಯಾಣ ಉಪಕ್ರಮವಾಗಿದ್ದು, ಸ್ವಾಭಾವಿಕವಾಗಿ, ಬಿಜೆಪಿಯು ಇದರಿಂದ ವಿಚಲಿತವಾಗಿದೆ. ರಾಜ್ಯದಲ್ಲಿ ಕೇಸರಿ ಪಕ್ಷದೊಳಗೆ ಭಿನ್ನಾಭಿಪ್ರಾಯಗಳಿದ್ದು, ಬಿಜೆಪಿ ಮತ್ತು ಅದರ ಮೈತ್ರಿ ಪಾಲುದಾರ ಜೆಡಿಎಸ್ ಜಿದ್ದಾಜಿದ್ದಿಯಲ್ಲಿ ತೊಡಗಿವೆ ಎಂದು ಸುರ್ಜೆವಾಲ ಆರೋಪಿಸಿದ್ದಾರೆ.
ಹಸುಗಳ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಶೇಕ್ ನಸ್ರು ಬಂಧಿತ ಆರೋಪಿಯಾಗಿದ್ದು, ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿದ್ದು, ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲೆಯುವ ಅಂಗಡಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಚಿಕಿತ್ಸೆ ಬಳಿಕ ಹಸುಗಳು ಅಪಾಯದಿಂದ ಪಾರಾಗಿವೆ ಎಂದು ಡಿಸಿಪಿ (ಪಶ್ಚಿಮ) ಎಸ್ ಗಿರೀಶ್ ಅವರು ಹೇಳಿದ್ದಾರೆ.
ಬೆಂಗಳೂರಿನ ಚೊಕ್ಕಸಂದ್ರದಲ್ಲಿ ಅನಿಲ ಸೋರಿಕೆಯಿಂದಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಡಿಗೆಗೆಂದು ವಾಸವಿದ್ದ ಗಾಯಾಳುಗಳಾದ ದಿಜುಧಾರ್ ಮತ್ತು ಅವರ ಪತ್ನಿ ಅಂಜಲಿ ದಾಸ್ ಅವರ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ನೆರೆಹೊರೆಯವರೂ ಗಾಯಗೊಂಡಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತ ತಾಯಿಯೊಬ್ಬಳು ಮಕ್ಕಳ ಸಮೇತ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು. ಘಟನೆಯಲ್ಲಿ ನಾಲ್ಕು ಮಕ್ಕಳು ಸಾವನ್ನಪ್ಪಿವೆ. ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದಾರೆ. ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಮಕ್ಕಳನ್ನು ಕಾಲುವೆಗೆ ಎಸೆದಿದ್ದನ್ನು ನೋಡಿದ ಸ್ಥಳೀಯರು ಮಕ್ಕಳ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮಕ್ಕಳು ನೀರುಪಾಲಾಗಿದ್ದವು. ಆದರೆ ತಾಯಿ ಭಾಗ್ಯ ಭಜಂತ್ರಿಯನ್ನು ರಕ್ಷಿಸಿದ್ದಾರೆ. ಸ್ಥಳೀಯ ಮೀನುಗಾರರು ಇಬ್ಬರು ಹೆಣ್ಣು ಮಕ್ಕಳ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಗಂಡು ಮಕ್ಕಳ ಮೃತದೇಹಕ್ಕಾಗಿ ಹುಡುಕಾಡುತ್ತಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದ ರೀತಿಯಲ್ಲಿ ಗಣರಾಜ್ಯೋತ್ಸವದಂದು 6 ಗಣ್ಯರ ಮನೆ ಸ್ಫೋಟಿಸುವುದಾಗಿ ವ್ಯಕ್ತಿಯೋರ್ವ ಪೊಲೀಸ್ ಆಯುಕ್ತರ ಕಂಟ್ರೋಲ್ ರೂಮ್ ಗೆ ಕರೆ ಮಾಡಿದ್ದ ಘಟನೆ ಇಂದು ವರದಿಯಾಗಿದೆ. ಈ ಸಂಬಂಧ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರಿಗೆ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದ್ದು, ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿ ಸೈಯದ್ ತನ್ನ ಸೇಡು ತೀರಿಸಿಕೊಳ್ಳಲು ಈ ರೀತಿ ಹುಸಿ ಬಾಂಬ್ ಕರೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಸೈಯದ್ ನಗರದಲ್ಲಿ ಸ್ಫೋಟಗಳನ್ನು ನಡೆಸಲು ಇಸ್ಮಾಯಿಲ್, ಅಲ್ತಾಫ್, ನಹಿದ್, ಅಮ್ಜಾದ್ ಮತ್ತು ಹುಮಾಯೂನ್ ಎಂಬುವವರು ಸಂಚು ರೂಪಿಸಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದ.
Advertisement