
ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ನಿರ್ದೇಶನದ ಮೇರೆಗೆ ಪಾಲಿಕೆ ಆಡಳಿತ ಇಲಾಖೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಜನವರಿ 10ರಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಬಿಬಿಎಂಪಿಯ 54 ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು.
ನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ ಸಹಾಯಕ ಕಂದಾಯ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಅಮ್ಮನ ಬದಲಿಗೆ ಅವರ ಮಗ ನವೀನ್ ಕಚೇರಿ ಲಾಗಿನ್ ಐಡಿ ಪಡೆದು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು.
ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಸಿದ್ದಾಪುರ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಕ್ರಮವಾಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ ನನ್ನು ಬಂಧಿಸಿದ್ದಾರೆ.
ತನ್ನ ಬದಲಿಗೆ ತನ್ನ ಮಗನಿಂದ ಕಚೇರಿಯಲ್ಲಿ ಕೆಲಸ ಮಾಡಿಸುತ್ತಿದ್ದ ಸಹಾಯಕ ಕಂದಾಯ ಅಧಿಕಾರಿ ಸುಜಾತಾ ಹಾಗೂ ಎಸ್ ಡಿಎ ಕವಿತಾ ಅವರನ್ನು ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.
Advertisement