
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸ್ ಕೇಸ್ ರದ್ದುಗೊಳಿಸಬೇಕು ಎಂದು ಕೋರಿ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರ ಮುಂದೂಡಿದೆ.
ಇಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ಸಿಐಡಿ ವಿಡಿಯೋ ದೃಶ್ಯಾವಳಿ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿ ಮತ್ತಿತರ ಸಾಕ್ಷ್ಯಗಳನ್ನು ಸಲ್ಲಿಸಿತು.
ಯಡಿಯೂರಪ್ಪ ಅವರಿಗೆ ಜಾಮೀನು ಮಂಜೂರು ಮಾಡುವ ಮಧ್ಯಂತರ ಆದೇಶವನ್ನು ವಿಸ್ತರಿಸಿದ ನ್ಯಾಯಾಲಯ. ವಿಚಾರಣಾ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಿತು. ಮುಂದಿನ ವಿಚಾರಣೆಯನ್ನು ಜನವರಿ 17 ರಂದು ನಿಗದಿಪಡಿಸಲಾಗಿದೆ.
2024ರ ಫೆಬ್ರವರಿಯಲ್ಲಿ ತನ್ನ ಬೆಂಗಳೂರಿನ ನಿವಾಸದಲ್ಲಿ 17 ವರ್ಷದ ಬಾಲಕಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಈ ಆರೋಪ ಮಾಡಿದ್ದ ಸಂತ್ರಸ್ತೆ ತಾಯಿ ಮೇ 2024 ರಂದು ಶ್ವಾಸಕೋಶ ಕ್ಯಾನ್ಸರ್ ನಿಂದ ಮೃತಪಟ್ಟಿದ್ದರು.
ನಂತರ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಉಲ್ಲೇಖಿಸಿ ಸಂತ್ರಸ್ತೆಯ ಸಹೋದರ ಯಡಿಯೂರಪ್ಪ ಅವರನ್ನು ಬಂಧಿಸಿ ಹೆಚ್ಚಿನ ತನಿಖೆಗೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
Advertisement