
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆಂದು ವಿಜಯಾ ಆಸ್ಪತ್ರೆ ವೈದ್ಯರು ಗುರುವಾರ ತಿಳಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿರವಾಗಿದೆ. ಚೇತರಿಸಿಕೊಳ್ಳಲು ಕನಿಷ್ಠ 1 ತಿಂಗಳ ಬೆಡ್ ರೆಸ್ಟ್ ಅಗತ್ಯವಿದೆ ಎಂದು ಎಂದು ಮೂಳೆ ತಜ್ಞ ಡಾ.ರವಿ ಪಾಟೀಲ್ ಅವರು ಹೇಳಿದ್ದಾರೆ.
ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅಲ್ಟ್ರಾಸೌಂಡ್ ಮತ್ತು ಕ್ಲಿನಿಕಲ್ ಪರೀಕ್ಷೆಗಳು ತೃಪ್ತಿಕರವಾಗಿವೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದರು.
ಹೆಬ್ಬಾಳ್ಕರ್ ಅವರ ಸಹೋದರ ಎಂಎಲ್‌ಸಿ ಚನ್ನರಾಜ್ ಅವರ ಆರೋಗ್ಯವೂ ಸುಧಾರಿಸಿದ್ದು, ಅವರನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಹೇಳಿದರು.
ಗಾಯಗೊಂಡಿರುವ ಹೆಬ್ಬಾಳ್ಕರ್ ಅವರ ಕಾರು ಚಾಲಕ ಮತ್ತು ಗನ್‌ಮ್ಯಾನ್‌ಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರನ್ನೂ ಕೆಲವೇ ದಿನಗಳಲ್ಲಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಈ ನಡುವೆ ಕಳೆದ ಮೂರು ದಿನಗಳಲ್ಲಿ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಲು ವಿವಿಧ ರಾಜಕೀಯ ಪಕ್ಷಗಳ ಹಲವಾರು ಪ್ರಮುಖ ನಾಯಕರು ಮತ್ತು ಗಣ್ಯರು ವಿಜಯಾ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಜಾರಕಿಹೊಳಿ ಅವರು ಬುಧವಾರ ಹೆಬ್ಬಾಳ್ಕರ್ ಅವರ ಸಹೋದರ ಮತ್ತು ಮಗನನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಕೂಡ ಇದೇ ವೇಳೆ ಭೇಟಿ, ಆರೋಗ್ಯ ವಿಚಾರಿಸಿದರು.
ಕಾರಂಜಿಮಠದ ಗುರುಸಿದ್ದ ಸ್ವಾಮಿ, ವಚನಾನಂದ ಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದರು.
ಸಚಿವ ಜಮೀರ್ ಅಹ್ಮದ್ ಮತ್ತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೆಬ್ಬಾಳ್ಕರ್ ಅವರ ಸಂಬಂಧಿಕರೊಂದಿಗೆ ಮಾತನಾಡಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕೂಡಲೇ ಆಕೆಯನ್ನು ಭೇಟಿಯಾಗುವುದಾಗಿ ಜಮೀರ್ ಅಹ್ಮದ್ ಅವರು ಹೇಳಿದ್ದಾರೆ.
ಏತನ್ಮಧ್ಯೆ ಹೆಬ್ಬಾಕರ್ ಅವರ ಬೆಂಬಲಿಗರು ಬೆಳಗಾವಿಯ ವಿವಿಧ ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದು, ಸಚಿವೆ ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂಜು ಮಾರಿಹಾಳದ ಶ್ರೀ ಬಸವೇಶ್ವರ ದೇವಸ್ಥಾನ ಮತ್ತು ಶ್ರೀ ಗುಡ್ಡದಮ್ಮ ದೇವಸ್ಥಾನದಲ್ಲಿ ಅಭಿಷೇಕ ಮತ್ತು ಪೂಜೆಯನ್ನು ನಡೆಸಿದ್ದಾರೆ.
Advertisement