
ಬೆಂಗಳೂರು: ಬೆಂಗಳೂರಿನಲ್ಲಿ ಎರಡನೇ ಏರ್ ಪೋರ್ಟ್ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಒಪ್ಪಿಗೆ ಪಡೆದುಕೊಂಡ ನಂತರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮೂಲಸೌಕರ್ಯ ಸಚಿವ ಎಂ. ಬಿ. ಪಾಟೀಲ್ ಭಾನುವಾರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂಬ ಮಾಹಿತಿ ನೀಡಲು ನಿರಾಕರಿಸಿದರು. ಮುಂದಿನ ಎರಡ್ಮೂರು ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಸಭೆ ನಡೆಸಿ, ಅವರಿಗೆ ಎಲ್ಲಾ ಮಾಹಿತಿ ನೀಡಲಾಗುವುದು ಎಂದರು.
ಸಿಎಂ ಸಿದ್ದರಾಮಯ್ಯ ಅವರಿಂದ ಒಪ್ಪಿಗೆ ಪಡೆದ ನಂತರ ಕೇಂದ್ರದ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಕಳುಹಿಸಲಾಗುವುದು ಎಂದು ತಿಳಿಸಿದರು. ಎರಡನೇ ವಿಮಾನ ನಿಲ್ದಾಣಕ್ಕಾಗಿ ಐದು ಜಾಗಗಳನ್ನು ಗುರುತಿಸಲಾಗಿದೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.
2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ದಾಬಸ್ ಪೇಟೆ, ಬಿಡದಿ ಮತ್ತು ಹಾರೋಹಳ್ಳಿ ಸಂಭವನೀಯ ಸ್ಥಳಗಳಾಗಿದ್ದರೂ ತುಮಕೂರಿಗೆ ಹೆಚ್ಚಿನ ಬೇಡಿಕೆಯಿದೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಎರಡನೇ ವಿಮಾನ ನಿಲ್ದಾಣವನ್ನು ಸರ್ಕಾರ ಯೋಜಿಸುತ್ತಿದೆ ಎಂದು ಅವರು ಹೇಳಿದರು.
Advertisement