ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಹೊಸ ಸಂಕಷ್ಟ ಎದುರಾಗಿದ್ದು, ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಮುನಿರತ್ನ ಹಾಗೂ ಇತರ ಆರು ಮಂದಿ ವಿರುದ್ಧ ಕಟ್ಟಡ ನಿರ್ಮಾಣ ಕಾರ್ಮಿಕರ ಮೇಲೆ ದೌರ್ಜನ್ಯ, ತಾತ್ಕಾಲಿಕ ಶೆಡ್‌ಗಳನ್ನು ಕೆಡವಿ, ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ 20 ವರ್ಷದ ದಿನಗೂಲಿ ಕಾರ್ಮಿಕ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು, ಶಾಸಕ ಮುನಿರತ್ನ, ವಸಂತಕುಮಾರ್, ಚೆನ್ನಕೇಶವ, ನವೀನ್, ಶ್ರೀರಾಮ, ಪೀಣ್ಯ ಕಿಟ್ಟಿ ಮತ್ತು ಪೀಣ್ಯ ಗಂಗಾ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಪೀಣ್ಯದ ಎಸ್‌ಆರ್‌ಎಸ್ ವೃತ್ತದ ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಗರ್ಭಿಣಿ ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು ಮೂರು ದಿನಗಳ ಕಾರ್ಯಾಚರಣೆ ನಡೆಸಿದ್ದ ಎಸ್ಪಿ ಎಂ.ನಾರಾಯಣ ನೇತೃತ್ವದ ತಂಡ ಐವರು ಆರೋಪಿಗಳನ್ನು ವಿಚಾರಣೆ ಸಲುವಾಗಿ ವಶಕ್ಕೆ ಪಡೆದಿದೆ. ರಾಜ್ಯದಲ್ಲಿ ನಡೆಯುತ್ತಿರುವ ಗೋಹಿಂಸೆ ಮತ್ತು ಗೋಹತ್ಯೆಯನ್ನ ಸರ್ಕಾರ ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ. ಗೋ ಹಂತಕರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಗೋ ಮಾಂಸ ಸಾಗಾಟದ ಜಾಲ ಇದರೆ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಗೃಹ ಸಚಿವ ಪರಮೇಶ್ವರ್ ಸಭೆಯಲ್ಲಿ ಸೂಚನೆ ನೀಡಿದ್ದರು.
ಬೆಂಗಳೂರಿನ ಕೆಆರ್ ಮಾರುಕಟ್ಟೆ ಬಳಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದ್ದು, ಈ ಸಂಬಂಧ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡು ಮೂಲದ ಮಹಿಳೆಯೊಬ್ಬರ ಮೇಲೆ ಕೆಆರ್ ಮಾರುಕಟ್ಟೆ ಗೋಡೌನ್ ಸ್ಟ್ರೀಟ್‌ನಲ್ಲಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದೂ ಅಲ್ಲದೆ ಸಂತ್ರಸ್ತೆ ಬಳಿಯಿದ್ದ ಚಿನ್ನದ ಆಭರಣ ಮತ್ತು ಮೊಬೈಲ್ ಅನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಕೆಆರ್ ಮಾಕುಕಟ್ಟೆಯಲ್ಲಿ ಯಲಹಂಕಕ್ಕೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ. ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್ನಕಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ಕೂಡಲೇ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಲೈಸೆನ್ಸ್ ಸಹ ರದ್ದು ಮಾಡಬಹುದಾಗಿದೆ. ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ರೇಣುಕಾಸ್ವಾಮಿ ಕೊಲೆ ಕೇಸ್ನಳಲ್ಲಿ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ ಕಂಡುಬರದ ಕಾರಣ ತಾತ್ಕಾಲಿಕವಾಗಿ ಅಂದರೆ ಕೇಸ್ ಮುಗಿಯುವತನಕ ಅಮಾನತ್ತಿನಲ್ಲಿಡಲು ಪೊಲೀಸರು ನಿರ್ಧರಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಖರ್ಗೆ ಅವರು, ಭಾರತದ ಸಂವಿಧಾನಕ್ಕೆ ಆಪತ್ತು ಎದುರಾಗಿದೆ. ಆ ಸಂವಿಧಾನದ ರಕ್ಷಣೆಯ ಹೊಣೆ ಕಾಂಗ್ರೆಸ್ ಮೇಲಿದೆ ಎಂದು ಹೇಳಿದರು. ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಈ ದೇಶದ ಜನರ ಮೇಲೆ ಸಂವಿಧಾನ ವಿರೋಧಿ RSSನ ಸಿದ್ಧಾಂತಗಳನ್ನು ಹೇರುತ್ತಿದೆ ಎಂದು ಆರೋಪಿಸಿದರು. ರಾಷ್ಟ್ರವನ್ನು ವಿಭಜಿಸುವ ಬಿಜೆಪಿಯ ಪ್ರಯತ್ನಗಳನ್ನು ಸೋಲಿಸಲು ಜನರು ತಮ್ಮ ಧರ್ಮಗಳು ಮತ್ತು ಸಂಸ್ಕೃತಿಗಳನ್ನು ಲೆಕ್ಕಿಸದೆ ಒಂದಾಗಬೇಕು ಎಂದು ಹೇಳಿದರು.
Advertisement