
ಯಲ್ಲಾಪುರ: ಲಾರಿ ಪಲ್ಟಿಯಾಗಿ 11 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ.
ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಪರಿಣಾಮ 10 ಮಂದಿ ವ್ಯಾಪಾರಿಗಳು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಅಲ್ಲದೆ, 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಜನರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಸಾವನ್ನಪ್ಪಿದವರನ್ನು ಫಯಾಜ್ ಜಮಖಂಡಿ (45), ವಾಸೀಂ ಮುಡಗೇರಿ (35), ಇಜಾಜ್ ಮುಲ್ಲಾ (20), ಸಾದೀಕ್ ಭಾಷ್ (30), ಗುಲಾಮ್ ಹುಸೇನ್ ಜವಳಿ (40), ಇಮ್ತಿಯಾಜ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25), ಅಸ್ಲಂ ಬಾಬುಲಿ ಬೆಣ್ಣಿ (24), ಜಲಾಲ್ ತಾರಾ (30) ಎಂದು ಗುರ್ತಿಸಲಾಗಿದೆ.
ಘಟನೆ ವೇಳೆ ಲಾರಿಯಲ್ಲಿ ಒಟ್ಟು 28 ಮಂದಿ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ. ಲಾರಿಯು ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು, ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಸಂಬಂಧ ಹೇಳಿಕೆ ನೀಡಿರುವ ಉತ್ತರಕನ್ನಡ ಜಿಲ್ಲೆಯ ಎಸ್ಪಿ ನಾರಾಯಣ್ ಯಲ್ಲಾಪುರ ಅವರು, ದಟ್ಟ ಮಂಜು ಇದ್ದ ಕಾರಣ ಅಪಘಾತ ಸಂಭವಿಸಿದೆ. ಮಂಜು ಮುಸುಕಿದ್ದರಿಂದ ಎದುರಿಗೆ ಬರುತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು 50 ಅಡಿ ಆಳದ ಹಳ್ಳಕ್ಕೆ ಉರುಳಿದೆ. ವಾಹನದಲ್ಲಿ ಹಣ್ಣು, ತರಕಾರಿಗಳಿತ್ತು, 28 ಜನ ಪ್ರಯಾಣಿಸುತಿದ್ದರು. ಲಾರಿ ಪಲ್ಟಿಯಾದ ಕಾರಣ ಜನರ ಮೇಲೆ ತರಕಾರಿ ಬಿದ್ದು ಉಸಿರುಗಟ್ಟಿ 9 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಅಪಘಾತವಾಗಿ 1 ಗಂಟೆ ನಂತರ ಮಾಹಿತಿ ದೊರೆತಿದೆ. ಅಲ್ಲಿಯವರೆಗೂ ಲಾರಿಯಲ್ಲಿ ಜನರಿರುವ ಬಗ್ಗೆ ಮಾಹಿತಿಯೇ ಇರಲಿಲ್ಲ. ಕ್ರೇನ್ ತಂದು ಲಾರಿ ಮೇಲೆತ್ತಿದಾಗ ಜನರಿರುವುದು ತಿಳಿದುಬಂದಿದೆ. ಆದರೆ, ಅಷ್ಟರಲ್ಲಿ 9 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದರು. ತಕ್ಷಣ ಉಳಿದವರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಗಂಭೀರ ಗಾಯವಾದವರನ್ನ ಹುಬ್ಬಳ್ಳಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಒಟ್ಟು 10 ಜನ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆಂದು ಮಾಹಿತಿ ನೀಡಿದ್ದಾರೆ.
ಮೃತರ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ ಘೋಷಣೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆಂದು ತಿಳಿಸಿದ್ದಾರೆ.
Advertisement