
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 25 ರಂದು ಅಧಿಕಾರಿಗಳ ಸಭೆ ಕರೆದಿದ್ದಾರೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶನಿವಾರ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು, ಸಂಬಂಧಿಸಿದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ ಚಿರಂಜೀವಿ ಅವರು ಸೂಚಿಸಿದ್ದಾರೆ.
ಹಾವೇರಿ, ಮೈಸೂರು, ಉಡುಪಿ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿದೆ. ಕಾಟ ತಾಳಲಾರದೆ ಜನ ಮನೆ, ಊರು ಬಿಟ್ಟು ಹೋಗುತ್ತಿದ್ದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸರಣಿ ಆತ್ಮಹತ್ಯೆ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಜನವರಿ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಿದ್ದು, ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ.
Advertisement