News headlines 23-01-2025 | ಮುಡಾ ಹಗರಣ: ಸಿಎಂ ಗೆ ಕ್ಲೀನ್ ಚಿಟ್?; ರಾಜ್ಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಲು ಸುದೀಪ್ ನಿರಾಕರಣೆ; ರೆಡ್ಡಿ-ರಾಮುಲು ವಾಕ್ಸಮರ, ಹೈಕಮಾಂಡ್ ಮಧ್ಯಪ್ರವೇಶ!

News headlines
ಸುದ್ದಿ ಮುಖ್ಯಾಂಶಗಳುonline desk

1. ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣ: ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್?

ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ತಿಳಿದುಬಂದಿದೆ.ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ, ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದು ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ.

2. ರಾಜ್ಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಲು Sudeep ನಕಾರ

2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ನಟ ಸುದೀಪ್ ಹಾಗೂ ನಟಿ ಅನುಪಮ ಗೌಡ ಕ್ರಮವಾಗಿ ಅತ್ಯುತ್ತಮ ನಟ, ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪೈಲ್ವಾನ್' ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಸುದೀಪ್ ಗೆ ಈ ಪ್ರಶಸ್ತಿ ಬಂದಿದೆ. 'ತ್ರಯಂಬಕಂ' ನಟನೆಗಾಗಿ ಅನುಪಮ ಗೌಡ 'ಅತ್ಯುತ್ತಮ ನಟಿ' ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಿರಿಯ ನಿರ್ದೇಶಕ ಪಿ. ಶೇಷಾದ್ರಿ ಅವರ 'ಮೋಹನದಾಸ', ಡಾರ್ಲಿಂಗ್ ಕೃಷ್ಣ ನಿರ್ದೇಶನದ ಲವ್ ಮಾಕ್ಟೆಲ್, ಅಘ್ಯಂ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಪಡೆದಿವೆ. ಕೋವಿಡ್ ಕಾರಣಗಳಿಂದ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿರಲಿಲ್ಲ.

ಸುದೀಪ್ ರಾಜ್ಯ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸುದೀಪ್, ನಾನು ಹಲವಾರು ವರ್ಷಗಳಿಂದ ಯಾವುದೇ ಪ್ರಶಸ್ತಿಗಳನ್ನು ಸ್ವೀಕರಿಸುತ್ತಿಲ್ಲ. ನನ್ನ ವೈಯಕ್ತಿಕ ಕಾರಣಗಳಿಂದಾಗಿ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ, ಅನೇಕ ಅರ್ಹ ನಟರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಅವರಿಗೇ ಈ ಪ್ರಶಸ್ತಿ ಸಿಗಬೇಕು ಎಂದು ಸುದೀಪ್ ಹೇಳಿದ್ದಾರೆ.

3. ಕಲರ್ಸ್ ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರ ದಾಳಿ

ಮಂಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ. ಕಾರ್ಯಕರ್ತರು ಮಹಿಳಾ ಸಿಬ್ಬಂದಿಯನ್ನು ಬೆದರಿಸುವುದು ಮತ್ತು ನಿಂದಿಸುವುದು ಕಂಡುಬಂದಿದೆ. ಮಂಗಳೂರು ನಗರದಾದ್ಯಂತ ಇರುವ ಮಸಾಜ್ ಸೆಂಟರ್ಗಳ‌ನ್ನು ಮುಚ್ಚುವಂತೆ ರಾಮ ಸೇನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಸಲೂನ್ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಿ ಹಾನಿಗೊಳಿಸಿದೆ. ಮಾಲೀಕರ ದೂರಿನ ಆಧಾರದ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ರಾಮಸೇನಾ ನಾಯಕ ಪ್ರಸಾದ್ ಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

4. ತೀವ್ರಗೊಂಡ ಬಿಜೆಪಿ ಬಣ ಬಡಿದಾಟ: ರಾಮುಲುಗೆ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕರೆ

ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಪಕ್ಷದ ಆಂತರಿಕ ಘರ್ಷಣೆ ತೀವ್ರಗೊಂಡಿದೆ. ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ ಶ್ರೀರಾಮುಲು ನಡುವೆ ವಾಕ್ಸಮರ ಹೆಚ್ಚುತ್ತಿದ್ದಂತೆ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ. ಶ್ರೀರಾಮುಲು ಅವರಿಗೆ ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕರೆ ಮಾಡಿದ್ದು, ಮನವೊಲಿಕೆಗೆ ಯತ್ನಿಸಿದ್ದಾರೆ. ಈ ವೇಳೆ ರಾಮುಲು ಇತ್ತೀಚಿಗೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತಮಗಾದ ಅವಮಾನವನ್ನು ವಿವರಿಸಿದ್ದಾರೆ. ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಜೆಪಿ ನಡ್ಡಾ ಶ್ರೀರಾಮುಲುಗೆ ಹೇಳಿದ್ದಾರೆ ಎನ್ನಲಾಗಿದೆ. ಇನ್ನು ಶ್ರೀರಾಮುಲು ಆರೋಪಕ್ಕೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಜನಾರ್ದನ ರೆಡ್ಡಿ, ಕಾಂಗ್ರೆಸ್ ಪಕ್ಷದಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಪರ್ಯಾಯ ನಾಯಕರನ್ನು ಬೆಳೆಸಲು ಡಿ.ಕೆ. ಶಿವಕುಮಾರ್ ಶ್ರೀರಾಮುಲು ಅವರನ್ನು ಎತ್ತಿ ಕಟ್ಟುತ್ತಿದ್ದಾರೆ ರಾಮುಲು ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ, ನನ್ನ ವಿರುದ್ಧ ಆರೋಪ ಮಾಡಿ ಹೋಗೋದು ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

5. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಪ್ರಕರಣ; ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com