
ಬೆಂಗಳೂರು: ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದ ಜಾಗ ಬಳಸಿಕೊಳ್ಳುವುದಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ
ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ನಲ್ಲಿ ವಿಚಾರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು, ಬೆಂಗಳೂರು ಅರಮನೆ ರಸ್ತೆ ಅಗಲೀಕರಣ ಯೋಜನೆ ವಿಚಾರವಾಗಿ ಟಿಡಿಆರ್ ವಿಸ್ತರಣೆಗೆ ಸಂಪುಟ ನಿರಾಕರಿಸಿದೆ. ವಾರಸುದಾರರಿಗೆ ಟಿಡಿಆರ್ ನೀಡದಿರಲು ಸಚಿವ ಸಂಪುಟ ನಿರ್ಧರಿಸಿದೆ ಎಂದರು.
ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾರದ ನಡುವೆ ತಿಕ್ಕಾಟ ನಡೆಯುತ್ತಿದೆ. ಈ ವಿಚಾರ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಬೇಕಾದ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸುವ ನಿರ್ಣಯ ಕೈಗೊಳ್ಳಲಾಗಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಕಿರುಕುಳ
ಇದೇ ವೇಳೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಕಿರುಕುಳ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಎಚ್ ಕೆ ಪಾಟೀಲ್ ಅವರು, ಇದನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ನಾಳೆ ಸಿಎಂ ಸಿದ್ದರಾಮಯ್ಯ ತುರ್ತು ಸಭೆ ಕರೆದಿದ್ದಾರೆ. ವಿಶೇಷ ಕಾನೂನು ತರಲು ನಿರ್ಧರಿಸಲಾಗಿದೆ. ವಿಶೇಷ ಕಾನೂನು ತರಲು ನಿರ್ಣಯ ಮಾಡುತ್ತೇವೆ. ಜನ ಸಾಮಾನ್ಯರಿಗೆ ಆಗುತ್ತಿರುವ ಶೋಷಣೆ ತಡೆಯಲು ಕ್ರಮಕೈಗೊಳ್ಳುತ್ತೇವೆ ಮತ್ತು ಕರ್ನಾಟಕ ಮೈಕ್ರೋ-ಇನ್ಸ್ಟಿಟ್ಯೂಷನ್ ಆಫ್ ಮನಿ ಲೆಂಡಿಂಗ್ ಮಸೂದೆಯನ್ನು ಮಂಡಿಸಲು ಸರ್ಕಾರ ಯೋಜಿಸಿದೆ ಎಂದರು.
Advertisement