ಜನವರಿ 26ರ ಗಣರಾಜ್ಯೋತ್ಸವ ದಿನ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದತೆ ಬಗ್ಗೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಯಾವುದೇ ಸಮಸ್ಯೆಯಾಗದಂತೆ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. 8 ಡಿಸಿಪಿ, 17 ಎಸಿಪಿಗಳು ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು ಭದ್ರತೆ ನೋಡಿಕೊಳ್ಳಲಿದ್ದಾರೆ. ಬಂದೋಬಸ್ತ್ಗೆ 10 ಕೆಎಸ್ಆರ್ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತ್ಮಹತ್ಯೆ ಘಟನೆಗಳು ವರದಿಯಾಗಿವೆ. ಈ ನಡುವೆ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದುರಾಡಳಿತವನ್ನು ಹತ್ತಿಕ್ಕಲು ಸದ್ಯ ಇರುವ ಕಾನೂನು ಪರಿಣಾಮಕಾರಿಯಾಗಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ MFIಗಳಿಂದ ಕಿರುಕುಳದ ಬಗ್ಗೆ ದೂರುಗಳು ಬಂದಿವೆ. ಸದ್ಯ ಅಸ್ತಿತ್ವದಲ್ಲಿರುವ ಕಾನೂನುಗಳು ಅಷ್ಟೇನು ಪರಿಣಾಮಕಾರಿಯಾಗಿಲ್ಲ ಎಂಬುದು ನಮಗೆ ತಿಳಿದು ಬಂದಿದೆ. ಕಾಂಗ್ರೆಸ್ ಸರ್ಕಾರ ಈ ಕಾನೂನಿಗೆ ತಿದ್ದುಪಡಿ ತರಲಿದೆ ಎಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, 2018ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಇಂಥ ಕಿಡಿಗೇಡಿ ಫೈನಾನ್ಸ್ ಗಳಿಂದ ಜನರನ್ನು ರಕ್ಷಣೆ ಮಾಡಬೇಕು ಎಂದು ಋಣಮುಕ್ತ ಕಾಯ್ದೆ ಜಾರಿಗೆ ತಂದೆ. ನನ್ನ ಸರಕಾರ ಹೋಯಿತು, ಆ ಕಾಯ್ದೆಯನ್ನು ಕಸದ ಬುಟ್ಟಿಗೆ ಹಾಕಿದರು ಎಂದು ಕಿಡಿಕಾರಿದರು.
ದಾವೋಸ್ ಶೃಂಗಸಭೆಯಲ್ಲಿ ರಾಜ್ಯ ಸರ್ಕಾರ ಈ ಸಲ ಪ್ರಜ್ಞಾಪೂರ್ವಕವಾಗಿಯೇ ಭಾಗವಹಿಸುತ್ತಿಲ್ಲ. ಅಲ್ಲಿಗೂ ಹೋಗಿ ಒಡಂಬಡಿಕೆಗಳಿಗೆ ಸಹಿ ಹಾಕುವುದು ಮತ್ತು ಅವೇ ಕಂಪನಿಗಳನ್ನು ಇಲ್ಲಿಗೂ ಕರೆದು ಮತ್ತೆ ಅದೇ ಒಡಂಬಡಿಕೆಗಳಿಗೆ ಸಹಿ ಹಾಕುವುದರಿಂದ ಗೊಂದಲ ಉಂಟಾಗುತ್ತದೆ. ಇದನ್ನು ತಪ್ಪಿಸಲೆಂದೇ ನಾವು ಈ ಸಲ ದಾವೋಸ್ ಶೃಂಗಸಭೆಯಿಂದ ದೂರ ಉಳಿದಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಫೆ.11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಜಾಗತಿಕ ಮಟ್ಟದ ಕಂಪನಿಗಳೆಲ್ಲ ಭಾಗವಹಿಸಲಿವೆ. ಇದರಿಂದ ರಾಜ್ಯಕ್ಕೆ 8ರಿಂದ 10 ಲಕ್ಷ ಕೋಟಿ ರೂಪಾಯಿ ಹೂಡಿಕೆ ಬರುವ ನಿರೀಕ್ಷೆ ಇದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರಾ ಗೌಡ ಮತ್ತು ಇತರ ಐದು ಜನರಿಗೆ ನೀಡಲಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಆದರೆ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿಯನ್ನು ವಿಚಾರಣೆ ನಡೆಸಲು ಕೋರ್ಟ್ ಒಪ್ಪಿಕೊಂಡಿದೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲ ಮತ್ತು ಆರ್ ಮಹಾದೇವನ್ ಅವರನ್ನೊಳಗೊಂಡ ಪೀಠವು ಈ ಸಂಬಂಧ ದರ್ಶನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯೊಬ್ಬರ ಮನೆಗೆ ದಾಳಿ ನಡೆಸಿ 30 ಲಕ್ಷ ನಗದು ದರೋಡೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕೇರಳದ ಕೊಲ್ಲಂ ಜಿಲ್ಲೆಯ ಅನಿಲ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಜ. 6 ರಂದು 6 ಜನ ದುಷ್ಕರ್ಮಿಗಳು ತಾವು ಇಡಿ ಅಧಿಕಾರಿಗಳೆಂದು ಹೇಳಿ ಬಂಟ್ವಾಳದಲ್ಲಿರುವ ಸಿಂಗಾರಿ ಬೀಡಿ ಉದ್ಯಮಿಯ ಮನೆಯಲ್ಲಿ ಶೋಧ ನಡೆಸಿದ್ದರು. ಸುಮಾರು 30 ಲಕ್ಷ ನಗದು ದೋಚಿ, ಇದಕ್ಕೆ ಸಂಬಂಧಿಸಿ ದಾಖಲೆ ನೀಡುವಂತೆ ಸೂಚಿಸಿ ಮಂಗಳೂರಿನ ಕಚೇರಿಗೆ ಭೇಟಿ ನೀಡುವಂತೆ ಹೇಳಿದ್ದರು. ಹಣ ಪಡೆದುಕೊಂಡು ಹೋದ ಬಳಿಕ ಮೊಬೈಲ್ ನಂಬರ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದರು.
Advertisement