ಮುಡಾ ಹಗರಣ: ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ

ಹಗರಣ ಸಂಬಂಧ ವರದಿ ಸಲ್ಲಿಸಲು ನ್ಯಾಯಾಲಯ ಜ.27ರ ಗಡುವು ನೀಡಿತ್ತು. ಆದರೆ ಜನವರಿ 27 ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಗೆ ಮುನ್ನ ಇಂದು ವರದಿಯನ್ನು ಸಲ್ಲಿಸಲಾಗಿದೆ.
Siddaramaiah
ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಶನಿವಾರ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಹಗರಣ ಸಂಬಂಧ ವರದಿ ಸಲ್ಲಿಸಲು ನ್ಯಾಯಾಲಯ ಜ.27ರ ಗಡುವು ನೀಡಿತ್ತು. ಆದರೆ ಜನವರಿ 27 ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಗೆ ಮುನ್ನ ಇಂದು ವರದಿಯನ್ನು ಸಲ್ಲಿಸಲಾಗಿದೆ.

ಮೈಸೂರು ಲೋಕಾಯುಕ್ತ ಅಧಿಕಾರಿಗಳು ವರದಿಯ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಆದರೆ, ಇದು ಅಂತಿಮ ವರದಿಯಲ್ಲ, ಈವರೆಗಿನ ತನಿಖಾ ಪ್ರಗತಿ ವರದಿಯಷ್ಟೇ. ಇನ್ನೂ ವರದಿಗೆ ಮತ್ತಷ್ಟು ಕಾಲಾವಕಾಶ ಕೋರಲು ಮುಂದಾಗಿದ್ದಾರೆಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಈ ವರದಿಯನ್ನು ಲೋಕಾಯುಕ್ತ ಪೊಲೀಸರ ನೇತೃತ್ವದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಎಡಿಜಿಪಿ ಮನೀಶ್ ಖಾರ್ಬಿಕರ್ ಮತ್ತು ಐಜಿಪಿ ಎ ಸುಬ್ರಹ್ಮಣ್ಯೇಶ್ವರ ರಾವ್ ಅವರು ಶುಕ್ರವಾರ ಪರಿಶೀಲಿಸಿದ್ದಾರೆ ಎಂದು ವರದಿಯಾಗಿದೆ.

Siddaramaiah
MUDA ಹಗರಣ: ನ್ಯಾಯಾಲಯಕ್ಕೆ ಲೋಕಾಯುಕ್ತ ತನಿಖಾ ವರದಿ; ಭಾರೀ ಕುತೂಹಲ!

ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ, ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25 ರಂದು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ನಿರ್ದೇಶಿಸಿತ್ತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಕೊಟ್ಟಿದ್ದಾರೆ ಇದು ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬಾಮೈದ ಜಾಗ ಕೊಟ್ಟಿದ್ದ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಆದರೂ ಸಿಎಂ ಪತ್ನಿಗೆ ವಿಜಯನಗರದಲ್ಲೇ ಏಕೆ ಸೈಟ್ ಕೊಟ್ಟರು ಎಂಬ ಪ್ರಶ್ನೆ ಮೂಡಿದೆ. ಇದೇ ಪ್ರಶ್ನೆ ಈಗ ಮುಡಾದ ನಡೆ ಮೇಲೆ ಅನುಮಾನ ಬರುವಂತೆ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com