
ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಖಾಸಗಿ ದೂರಿನ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ವಿಶೇಷ ನ್ಯಾಯಾಲಯ ಶನಿವಾರ ನೋಟಿಸ್ ಜಾರಿ ಮಾಡಿದೆ.
ಟಿಜೆ ಅಬ್ರಹಾಂ ಅವರು ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಬಿಎನ್‌ಎಸ್‌ಎಸ್, 2023 ರ ಸೆಕ್ಷನ್ 223 ರ ನಿಬಂಧನೆಯ ಪ್ರಕಾರ, ಯಾವುದೇ ಆದೇಶಕ್ಕೂ ಮೊದಲು, ಆರೋಪಿ ಸ್ಥಾನದಲ್ಲಿರುವವರ ವಾದ ಆಲಿಸುವುದು ಅವಶ್ಯಕ. ಹೀಗಾಗಿ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ವಿಚಾರಣೆಯನ್ನು ಫೆಬ್ರವರಿ 3ಕ್ಕೆ ಮುಂದೂಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಒತ್ತಾಯಿಸಿದ ಅರ್ಜಿದಾರರಲ್ಲಿ ಟಿ.ಜೆ.ಅಬ್ರಹಾಂ ಕೂಡ ಒಬ್ಬರಾಗಿದ್ದಾರೆ.
ಹಗರಣ ಸಂಬಂದ ತನಿಖೆಗೆ ಒಪ್ಪಿಗೆ ಕೋರಿ ಅಬ್ರಹಾಂ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ್ದ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದರು.
ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, 2023ರ ಬಿಎನ್‌ಎಸ್‌ಎಸ್‌ನ ಸೆಕ್ಷನ್ 356(1)(2) ಅಡಿಯಲ್ಲಿ ಅಬ್ರಹಾಂ ಅವರು ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದರು.
Advertisement