
ಬೆಂಗಳೂರು: ಈ ಹಿಂದೆ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಈ ಘಟನೆ ಮಾಸುವ ಮುನ್ನವೇ ಅದೇ ಪ್ರದೇಶದಲ್ಲಿ ಮತ್ತೊಂದು ಬೈಕ್ ಶೋರೂಂಗೆ ಬೆಂಕಿ ತಗುಲಿದೆ.
ಹೌದು.. ಬೆಂಗಳೂರಿನ ರಾಜಾಜಿನಗರದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಇಂದು ಮಧ್ಯಾಹ್ನ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ ಮೌಲ್ಯದ ದ್ವಿಚಕ್ರವಾಹನಗಳು ಬೆಂಕಿಗಾಹುತಿಯಾಗಿವೆ. ಒಟ್ಟು 10 ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, 20 ಬೈಕ್ ಗಳಿಗೆ ಭಾಗಶಃ ಹಾನಿಯಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಣ್ವ ಆಸ್ಪತ್ರೆ ಸಮೀಪದಲ್ಲಿರುವ ಶುಕ್ರ ಮೋಟರ್ಸ್ ನ ಓಕಿನೋವಾ ಎಲೆಕ್ಟ್ರಿಕಲ್ ಬೈಕ್ ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡು ನೋಡನೋಡುತ್ತಿದ್ದಂತೆ ಇಡೀ ಕಟ್ಟಡವನ್ನೇ ಬೆಂಕಿ ಆವರಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬೈಕ್‌ಗಳು ಬೆಂಕಿಗಾಹುತಿಯಾಗಿವೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಶೋರೂಂನಲ್ಲಿದ್ದ ಸಿಬ್ಬಂದಿಗಳು ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಪೊಲೀಸರಿಗೆ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿಗಳ ತ್ವರಿತ ಕ್ರಮದಿಂದಾಗಿ ಬೆಂಕಿ ಮೊದಲ ಮಹಡಿಗೆ ಹಬ್ಬಿಲ್ಲ. ಅಲ್ಲೂ ಕೂಡ ಸಾಕಷ್ಟು ಬೈಕ್ ಗಳು ಇದ್ದವು ಎನ್ನಲಾಗಿದೆ. ಅಗ್ನಿ ಅವಘಡ ವೇಳೆ 5 ಮಂದಿ ಸಿಬ್ಬಂದಿ ಶೋರೂಂನಲ್ಲಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಅವರು ಓಡಿ ಹೊರಬಂದು ಪಾರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿ ಅವಘಡ ಹಿನ್ನಲೆಯಲ್ಲಿ ಅಗ್ನಿಶಾಮಕ ವಾಹನಗಳು ರಸ್ತೆಯಲ್ಲಿ ನಿಂತಿದ್ದರಿಂದ ಈ ಮಾರ್ಗದಲ್ಲಿ ಕಿಲೋಮೀಟರ್‌ಗಟ್ಟಲೆ ಸಂಚಾರದಟ್ಟಣೆ ಉಂಟಾಗಿತ್ತು. ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Advertisement