
ಬೆಂಗಳೂರು: ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅನಾವರಣಗೊಳಿಸಿದರು.
ಇಂದು ಸಂಜೆ ವಿಶೇಷ ಪೂಜೆ ಸಲ್ಲಿಸುವ ಮೂಲಕ 43.6 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಸಿಎಂ, ಕನ್ನಡ ಭಾಷೆ, ಸಂಸ್ಕೃತಿ, ಕಲೆಯ ಬಗ್ಗೆ ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮಭಾಷೆಯಾಗುತ್ತದೆ ಎಂದರು.
ಒಂದು ಭಾಷೆ ಮಾತನಾಡುವ ಜನ ಒಂದು ಆಡಳಿತದ ಸೂರಿನಡಿ ಬರಬೇಕು ಎನ್ನುವುದು ಕನ್ನಡ ಏಕೀಕರಣ ಚಳವಳಿಯ ಆಶಯವಾಗಿತ್ತು. ಈ ಆಶಯ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಕನ್ನಡ ಓದುವುದನ್ನು, ಬರೆಯುವುದನ್ನು ಹೆಚ್ಚು ಹೆಚ್ಚು ಕಲಿಯಬೇಕು ಎಂದರು ಕರೆ ನೀಡಿದರು.
ಇದೇ ವೇಳೆ ಕನ್ನಡಪರ ಹೋರಾಟಗಾರರ ವಿರುದ್ಧದ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಈ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಶಿಲ್ಪಿ ಶ್ರೀಧರ್ ಮೂರ್ತಿ ಅವರು ನಿರ್ಮಾಣ ಮಾಡಿದ್ದು, ಈ ಮೂರ್ತಿ ನಿರ್ಮಾಣಕ್ಕೆ ಬರೋಬ್ಬರಿ 12 ತಿಂಗಳು ಸಮಯ ತೆಗೆದುಕೊಂಡಿದ್ದಾರೆ. ನೂರಾರು ಶಿಲ್ಪಿಗಳು, ತಂತ್ರಜ್ಞರು, ಕಲಾವಿದರು ಮೂರ್ತಿ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ.
Advertisement