ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತರು ಇಂದು ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂಬರ್ ಒನ್ ಆರೋಪಿಯಾಗಿದ್ದು, ಅವರ ಪತ್ನಿ ಬಿ.ಎಂ. ಪಾರ್ವತಿ ಎರಡನೇ ಆರೋಪಿಯಾಗಿದ್ದಾರೆ. ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ. ಉದ್ದೇಶ್, ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಬಳಿಕ ಮುಡಾ ಹಗರಣದ ಕುರಿತು ಸಿಬಿಐ ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ಕೈಗೆತ್ತಿಕೊಂಡಿತು. ಅಂತಿಮವಾಗಿ ಎರಡೂ ಕಡೆ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಆದೇಶವನ್ನು ಕಾಯ್ದಿರಿಸಿದೆ.
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೀಡಿದ್ದ ಇಡಿ ಸಮನ್ಸ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮುಂದಿನ ವಿಚಾರಣೆವರೆಗೆ ಅಂದರೆ ಫೆಬ್ರವರಿ 10ರವರೆಗೆ ಇಡಿ ಸಮನ್ಸ್ಗೆ ತಡೆ ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಇಂದು ಆದೇಶ ಹೊರಡಿಸಿದೆ. ಜನವರಿ 28ರಂದು ಬೆಳಗ್ಗೆ 11 ಗಂಟೆಗೆ ಇಡಿ ಕಚೇರಿಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಸಚಿವ ಭೈರತಿ ಸುರೇಶ್ ಗೆ ಇಡಿ ಸೋಮವಾರ ನೋಟಿಸ್ ನೀಡಿತ್ತು. ಇದಕ್ಕೆ ತಡೆ ನೀಡುವಂತೆ ಕೋರಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಮತ್ತೊಂದೆಡೆ ಮುಡಾದ ಮಾಜಿ ಆಯುಕ್ತ ಡಾ.ನಟೇಶ್‌ಗೆ ಇಡಿ ನೀಡಿದ್ದ ಸಮನ್ಸ್‌ನ್ನೇ ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಪ್ರಕರಣಗಳು ತಾರಕ್ಕಕ್ಕೇರಿದ್ದು, ಪ್ರತಿದಿನ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಇದರ ವಿರುದ್ಧ ಕಠಿಣ ಕಾನೂನು ತರುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲೇ ಮಹಿಳೆಯೊಬ್ಬರು ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ 53 ವರ್ಷದ ಜಯಶೀಲ ಆತ್ಮಹತ್ಯೆಗೆ ಶರಣಾಗಿದ್ದಾರೆ. IIFL, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಗಳಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಜಯಶೀಲ 5 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು.
ಮಂಗಳೂರಿನ ಹೊರವಲಯದ ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ. ರಸ್ತೆಯಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿಂದ ಕದ್ದಿದ್ದ 18 ಕೆಜಿ ಚಿನ್ನ ಮತ್ತು 3.80 ಲಕ್ಷ ರೂ. ನಗದನ್ನು ಮಂಗಳೂರು ನಗರ ಪೊಲೀಸ್ ತಂಡ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಪ್ರಕರಣ ಸಂಬಂಧ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಆರು ತಿಂಗಳ ಹಿಂದೆಯೇ ದರೋಡೆಗೆ ಸಂಚು ರೂಪಿಸಲಾಗಿತ್ತು. ಬಂಧಿತ ಆರೋಪಗಳಾದ ಮುರುಗನ್ ಮತ್ತು ಕಣ್ಣನ್ ಮಣಿ ಆರು ತಿಂಗಳ ಹಿಂದೆಯೇ ತಲೋಜಾ ಜೈಲಿನಲ್ಲಿ ಭೇಟಿಯಾಗಿದ್ದಾಗ ಈ ಬ್ಯಾಂಕ್ ದರೋಡೆಗೆ ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ.
ಬೆಂಗಳೂರಿನ ರಾಜಾಜಿನಗರದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಇಂದು ಮಧ್ಯಾಹ್ನ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾಗಿವೆ. ಒಟ್ಟು 10 ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, 20 ಬೈಕ್ ಗಳಿಗೆ ಭಾಗಶಃ ಹಾನಿಯಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರ ಶಂಕೆ ವ್ಯಕ್ತವಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಐವರು ಸಿಬ್ಬಂದಿ ಶೋರೂಂನಿಂದ ಹೊರಬಂದು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು. ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement