
ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆಯ ಎಲ್ಲ 8 ವಲಯಗಳಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ಗುರುತಿಸಿ ಕೂಡಲೆ ಅದನ್ನು ತೆರವುಗೊಳಿಸಬೇಕು. ಜೊತೆಗೆ ಅನಧಿಕೃತ ಜಾಹೀರಾತು ಅಳವಡಿಸಿರುವವರ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು ಎಂದು ಹೇಳಿದರು.
27,000 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ
ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಸಮೀಕ್ಷೆಯ ಮೂಲಕ 27,655 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ ಅವರಿಗೆ ನಿಗದಿಪಡಿಸಿರುವ ಸ್ಥಳದಲ್ಲೇ ಮಾರಾಟ ಮಾಡಲು ಕ್ರಮವಹಿಸಬೇಕೆಂದು ಸೂಚನೆ ನೀಡಿದರು.
ಒಂಟಿ ಮನೆ ಯೋಜನೆ ಅನುಷ್ಠಾನ
ನಗರದಲ್ಲಿ ಒಂಟಿ ಮನೆ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಿರುವ ಪೈಕಿ, ಅರ್ಹ ಫಲಾನುಭವಿಗಳನ್ನು ಕೂಡಲೇ ಗುರುತಿಸಬೇಕು. ಅನಂತರ ಹಂತ-ಹಂತವಾಗಿ ಅನುದಾನ ಬಿಡುಗಡೆಗೊಳಿಸಲು ಅಗತ್ಯ ಕ್ರಮವಹಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ.ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರಿತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ಸ್ನೇಹಲ್, ವಿನತ್ ಪ್ರಿಯಾ, ರಮ್ಯಾ, ರಮೇಶ್, ಕರೀಗೌಡ, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಉಪಸ್ಥಿತರಿದ್ದರು.
Advertisement