
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದೆ (ಮುಡಾ ಪ್ರಕರಣದ ಸಿಬಿಐ ತನಿಖೆಯನ್ನು ಕೋರಿ ಸಲ್ಲಿಸಿದ ಅರ್ಜಿ). ನನಗೇಕೆ ಭಯವಾಗಬೇಕು? ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಜಾರಿ ನಿರ್ದೇಶನಾಯಲಯದವರು (ಇ.ಡಿ) ನನ್ನ ಪತ್ನಿಗೆ ನೋಟೀಸ್ ಜಾರಿ ಮಾಡಿದ್ದು, ನ್ಯಾಯಾಲಯ ಅದಕ್ಕೆ ತಡೆಯಾಜ್ಞೆ ನೀಡಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿದ್ದು, ಸಿಬಿಐಗೆ ಪ್ರಕರಣ ವಹಿಸುವ ಸಂಬಂಧ ನ್ಯಾಯಾಲಯದಲ್ಲಿ ವಾದ ನಡೆಯುತ್ತಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಇ.ಡಿ ನೋಟೀಸ್ ಮಾತ್ರ ರಾಜಕೀಯ ಪ್ರೇರಿತ ಅಲ್ಲ, ಇಡೀ ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ತಿಳಿಸಿದರು.
ಮಹಾಕುಂಭದ ವೇಳೆ ಗಂಗಾ ನದಿಯಲ್ಲಿ ಸ್ನಾನ ಮಾಡುವುದರಿಂದ ಬಡತನ ದೂರವಾಗುವುದಿಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ಬಗ್ಗೆ ಖರ್ಗೆ ಅವರನ್ನೇ ಕೇಳಿ. ನನ್ನ ಅಭಿಪ್ರಾಯವೂ ಇದೇ ಆಗಿದೆ. ಗಂಗಾನದಿಯಲ್ಲಿ ಸ್ನಾನ ಮಾಡುವುದರಿಂದ ಹಿಂದಿನ ಪಾಪಗಳು ತೊಲಗುತ್ತದೆ ಎಂಬುದು ನಂಬಿಕೆ. ನಾವೆಲ್ಲರೂ (12ನೇ ಶತಮಾನದ ಸಮಾಜ ಸುಧಾರಕ) ಬಸವಣ್ಣನವರ ಅನುಯಾಯಿಗಳು. ಪಾಪ ಪುಣ್ಯಗಳೆಲ್ಲವೂ ಇಲ್ಲಿಯೇ ಇದೆ ಎಂದರು.
ಇದೇ ವೇಳೆ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರು ಹಿಂದೂ ಧರ್ಮದ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಮತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Advertisement