ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದ ಬಳಕೆ ಮಾಡುವ ಮೂಲಕ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಇದೀಗ ರವಿಕುಮಾರ್ ಹೇಳಿಕೆ ವಿರುದ್ಧ ರಾಜಕೀಯ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮ ನೋಹರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಮನೋಹರ್ ಅವರು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಗುರುವಾರ ಭೇಟಿ ಮಾಡಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರ ಸದಸ್ಯತ್ವ ರದ್ದುಗೊಳಿಸುವಂತೆ ಮನವಿ ಸಲ್ಲಿಸಿದರು. ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಎನ್ ರವಿಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದ್ದರು.
ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ವೇದಿಕೆ ಮೇಲೆ ಸಾರ್ವಜನಿಕವಾಗಿ ಸಿಎಂ ಸಿದ್ದರಾಮಯ್ಯ ಕೈ ಎತ್ತಿ ಹೊಡೆಯಲು ಮುಂದಾಗಿದ್ದ ಘಟನೆಯಿಂದ ತೀವ್ರವಾಗಿ ಮನನೊಂದಿದ್ದ ಎಎಸ್ ಪಿ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ಮತ್ತ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಭರಮನಿ ಅವರ ಜೊತೆ ಮಾತನಾಡಿ ಮನವೊಲಿಸಿದ್ದಾರೆ ಎನ್ನಲಾಗಿದೆ. ಇಂದು ಭರಮನಿ ಅವರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ. ಹೀಗಾಗಿ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳುತ್ತದೆ. ಅಲ್ಲಿಯವರೆಗೂ ಕರ್ತವ್ಯಕ್ಕೆ ಹಾಜರಾಗುತ್ತೇನೆ ಎಂದು ಭರಮನಿ ಹೇಳಿದರು. ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಸಿದ್ದರಾಮಯ್ಯ ಕೈ ಮಾಡಲು ಮುಂದಾಗಿದ್ದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತ ಘಟನೆಯಾಗಿದ್ದು ಸಿಎಂ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.
ಪರಿಶಿಷ್ಟ ಜಾತಿಗೆ ಜಾತಿ ಜನಗಣತಿ ನಡೆಸುವಾಗ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಬಿಬಿಎಂಪಿಯಲ್ಲಿ ಕೆಲಸ ಮಾಡುತ್ತಿರುವ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಬಿಬಿಎಂಪಿಯ ಕಂದಾಯ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರಮೇಶ್, ಪೆದ್ದರಾಜು ಮತ್ತು ಸಿ ಸೆಂಥಿಲ್ ಕುಮಾರ್ ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ. ಮನೆ-ಮನೆಗೆ ಸ್ಟಿಕ್ಕರ್ ಅಂಟಿಸುವ ಕೆಲಸದಲ್ಲಿ ತೊಡಗಿದ್ದ ಗಣತಿದಾರರು ಮತ್ತು ಸಿಬ್ಬಂದಿ HRBR ಲೇಔಟ್‌ನಲ್ಲಿ ಆಯಾ ಮನೆಗಳ ಮಾಲೀಕರು ಮತ್ತು ನಿವಾಸಿಗಳನ್ನು ಸಂಪರ್ಕಿಸದೆ ಇಷ್ಟಬಂದಂತೆ ಸ್ಟಿಕ್ಕರ್‌ಗಳನ್ನು ಅಂಟಿಸಿದ್ದರು. ಇದರ ವಿರುದ್ಧ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು. ಇದನ್ನು ಗಮನಿಸಲು ಅಧಿಕಾರಿಗಳು ವಿಫಲರಾಗಿದ್ದು ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ತೋರಿದ್ದಾರೆ ಎಂದು ಅಮಾನುತ ಮಾಡಲಾಗಿದೆ.
ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾರಣಗಳಿಂದ ಸಾವಿನ ಸಂಖ್ಯೆ ಅಧಿಕವಾಗಿ ಸಂಭವಿಸಿದ್ದು, ಇದಕ್ಕೆ ಕೋವಿಡ್ ಲಸಿಕೆ ಕಾರಣವಾಗಿರಬಹುದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂದೇಹ ವ್ಯಕ್ತಪಡಿಸಿದ್ದು, ಈಗ ಚರ್ಚೆಯನ್ನು ಹುಟ್ಟುಹಾಕಿದೆ. ಮುಖ್ಯಮಂತ್ರಿಗಳ ಅಭಿಪ್ರಾಯಕ್ಕೆ ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 2020-21ರಲ್ಲಿ ಕೋವಿಡ್-19 ಸಾಂಕ್ರಾಮಿಕ ತೀವ್ರವಾಗಿ ಕಾಡುತ್ತಿದ್ದ ಸಂದರ್ಭದಲ್ಲಿ ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಕೋವಿಡ್ ಲಸಿಕೆಗಳನ್ನು ತುರ್ತು ಬಳಕೆ ಅಧಿಕಾರ ಚೌಕಟ್ಟಿನಡಿಯಲ್ಲಿ ಅನುಮೋದಿಸಲಾಗಿದೆ. ಸುರಕ್ಷತೆ ಮತ್ತು ಪರಿಣಾಮಕಾರಿತ್ವಕ್ಕಾಗಿ ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಕಠಿಣ ಶಿಷ್ಠಾಚಾರಗಳನ್ನು ಅನುಸರಿಸಿದ ನಂತರವೇ ಲಸಿಕೆಗಳನ್ನು ಅನುಮೋದಿಸಲಾಗಿದೆ ಎಂದು ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ.
ಮುಂದಿನ ಏಳು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಇದೇ ಪರಿಸ್ಥಿತಿ ಮುಂದುವರೆಯುವ ನಿರೀಕ್ಷೆಯಿದೆ. ನಂತರ ಕ್ರಮೇಣ ತೀವ್ರತೆಯು ಕಡಿಮೆಯಾಗಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಗರಿಷ್ಠ 27, ಕನಿಷ್ಠ 20 ಡಿಗ್ರಿ ಸೆಲ್ಸಿಯನ್ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ.
Advertisement