ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜುಲೈ 8ರವರೆಗೂ ಅವರನ್ನು ಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಆದೇಶ ನೀಡಿದೆ. ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ನೀಡಿದ ದೂರಿನ ಆಧಾರದ ಮೇಲೆ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ನಿನ್ನೆ ಎಫ್ಐಆರ್ ದಾಖಲಿಸಲಾಗಿತ್ತು. ಈ ಎಫ್ ಐಆರ್ ನ್ನು ಪ್ರಶ್ನಿಸಿ ರವಿಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ, ರವಿಕುಮಾರ್ ಹೇಳಿಕೆ ವಿರುದ್ಧ ಕಾಂಗ್ರೆಸ್ MLCಗಳು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿವರಣೆ ಕೋರಿ ರವಿಕುಮಾರ್ ಗೆ ಪತ್ರ ಬರೆದಿದ್ದೇನೆ. ಅವರು ಉತ್ತರಿಸಿದ ನಂತರ, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೊರಟ್ಟಿ ಹೇಳಿದರು.
ದೇವನಹಳ್ಳಿ ಭೂಸ್ವಾಧೀನದ ವಿರುದ್ಧ ನಡೆಯುತ್ತಿರುವ ರೈತ ಹೋರಾಟದ ಹಿನ್ನೆಲೆಯಲ್ಲಿ ರೈತ ಮುಖಂಡರ ಜೊತೆಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ಅಪೂರ್ಣಗೊಂಡಿದೆ. ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಭೂಸ್ವಾಧೀನ ಸಂಬಂಧ ಫೈನಲ್ ನೋಟೀಫಿಕೇಷನ್ ಆಗೋಗಿದೆ. ಹೀಗಾಗಿ ಕಾನೂನು ಗೊಂದಲಗಳು ಇವೆ. ಸಮಸ್ಯೆ ಇತ್ಯರ್ಥಕ್ಕೆ ಸಮಯ ಬೇಕು ಅಂತ ಹೇಳಿದ್ದೇನೆ ಎಂದರು. ಈ ಬಗ್ಗೆ ಚರ್ಚಿಸಲು ಹತ್ತು ದಿನ ಸಮಯ ತೆಗೆದುಕೊಂಡಿದ್ದೇನೆ. ಜುಲೈ 15ಕ್ಕೆ ಮತ್ತೆ ರೈತರ ಜೊತೆ ಮತ್ತೆ ಸಭೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇನ್ನು ಸರ್ಕಾರದ ಭೂಸ್ವಾದೀನ ನಡೆ ವಿರೋಧಿಸಿ ಮೆಜೆಸ್ಟಿಕ್ ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಗುಂಡ್ಲುಪೇಟೆಯ ರೈತ 50 ವರ್ಷದ ಈಶ್ವರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ 'ಅಸ್ವಾಭಾವಿಕ ಸಾವು'ಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪಕ್ಕಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ವೈ ಚಕ್ರಪಾಣಿ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲು ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಶುಕ್ರವಾರ ಶಿಫಾರಸು ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 26 ರಂದು ಎಂಎಂ ಹಿಲ್ಸ್ ನ ಹುಗ್ಯಾಮ್ ವ್ಯಾಪ್ತಿಯಲ್ಲಿ ಒಂದು ಹೆಣ್ಣು ಹುಲಿ ಮತ್ತು ಅದರ ನಾಲ್ಕು ಮರಿಗಳು ಸತ್ತಿರುವುದು ಕಂಡುಬಂದಿತ್ತು. ಅವರ ನಡವಳಿಕೆಯ ಬಗ್ಗೆ ಇಲಾಖಾ ತನಿಖೆಗೂ ಖಾಂಡ್ರೆ ಶಿಫಾರಸು ಮಾಡಿದ್ದಾರೆ. ಘಟನೆಯ ತನಿಖೆಗಾಗಿ ರಚಿಸಲಾದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿ ಸಲ್ಲಿಸಿದ ಪ್ರಾಥಮಿಕ ವರದಿಯನ್ನು ಪರಿಶೀಲಿಸಿದ ನಂತರ ಖಂಡ್ರೆ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.
ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್‌ಐಎ ವಶಕ್ಕೆ ಪಡೆದಿದೆ. 2022ರ ಜುಲೈನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಅಂದಿನಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ರೆಹಮಾನ್ ಕತಾರ್‌ನಿಂದ ಕೇರಳದ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾಗ ಎನ್‌ಐಎ ತಂಡ ಆತನನ್ನು ವಶಕ್ಕೆ ಪಡೆದಿದೆ. ಅಬ್ದುಲ್ ರೆಹಮಾನ್ ಬಗ್ಗೆ ಸುಳಿವು ನೀಡಿದವರಿಗೆ 4 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿತ್ತು. ಈ ವರ್ಷದ ಏಪ್ರಿಲ್‌ನಲ್ಲಿ ಈ ಪ್ರಕರಣದ ಸಂಬಂಧ ಅಬ್ದುಲ್ ರೆಹಮಾನ್ ಮತ್ತು ಇಬ್ಬರು ತಲೆಮರೆಸಿಕೊಂಡಿರುವ ಆರೋಪಿಗಳು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.
ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಳೆದ ಏಪ್ರಿಲ್‌ನಲ್ಲಿ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರಿಗೆ ಸೂಚಿಸಿತ್ತು. ಅದರನ್ವಯ ಎಫ್‌ಐಆರ್ ದಾಖಲಿಸಲಾಗಿದೆ. ಈಶ್ವರಪ್ಪ ಜಲಸಂಪನ್ಮೂಲ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿರುವುದಾಗಿ ಆರೋಪಿಸಿ ವಕೀಲ ಬಿ.ವಿನೋದ್ ಅವರು 2012ರಲ್ಲಿ ಶಿವಮೊಗ್ಗದ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
Advertisement