
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನವದೆಹಲಿಗೆ ಭೇಟಿ ನೀಡಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಸ್ಥಾನ ಕುರಿತ ಡಿಕೆ.ಶಿವಕುಮಾರ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ,ಶಿವಕುಮಾರ್ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಹಾಗಾಗಿ ಆ ವಿಚಾರದ ಬಗ್ಗೆ ಚರ್ಚೆ ಮಾಡಲು ಇದು ಸೂಕ್ತ ಸಮಯವೂ ಅಲ್ಲ ಎಂದು ಹೇಳಿದ್ದಾರೆ.
ರಾಜಕೀಯ ಬೆಳವಣಿಗೆಗಳ ಕುರಿತು ವರಿಷ್ಠರೊಂದಿಗೆ ಚರ್ಚೆ ನಡೆಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು, ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಜುಲೈ 10 ರಂದು ಗುರುವಾರ ಸಭೆ ನಡೆಸಲಿದ್ದು, ಪಕ್ಷದ ವಿಚಾರವಾಗಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು. ಅವರ ನಾಯಕತ್ವವನ್ನು ಪಕ್ಷ ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ಜು.15 ರಂದು ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಸಭೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದರು.
ಸಿದ್ದರಾಮಯ್ಯ ಅವರು ಸಮಿತಿ ಮುಖ್ಯಸ್ಥರಲ್ಲದೇ ಇದ್ದರೂ, ಪ್ರಭಾವಿ ಒಬಿಸಿ ನಾಯಕರಾಗಿರುವ ಹಿನ್ನೆಲೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಪಕ್ಷವು ಅವರ ನಾಯಕತ್ವ ಹಾಗೂ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತಿದೆ. ಹಿಂದುಳಿದ ವರ್ಗಗಳನ್ನು ಸಂಘಟಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಅಕ್ಟೋಬರ್‌ನಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನ ನಡೆಸುವಂತೆ ಮನವಿ ಮಾಡಲಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ, ಗುರುವಾರ ಪಕ್ಷದ ಹೈಕಮಾಂಡ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
Advertisement